ಬೆಂಗಳೂರು :
ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹೂಡಿಕೆ ಮಾಡಲು ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಇದು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದರಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತೂ ಸಹ ಮಾಹಿತಿ ಒದಗಿಸುವಂತೆ ಸೂಚಿಸಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.