ಹಾಸನ(ಸಕಲೇಶಪುರ) , ಸೆಪ್ಟೆಂಬರ್ 6: ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಈ ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.
ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು,ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು.