ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ ಸಚಿವನಾಗಿ ಮತ್ತು ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆʼʼ ಎಂದು ಪತ್ರದಲ್ಲಿ ಹೇಳಿದ್ದಾರೆ.

ಬಚ್ಚೇಗೌಡ ಅವರು, ತಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು 2023ರ ಆಗಸ್ಟ್‌ ತಿಂಗಳಲ್ಲಿ ಘೋಷಿಸಿದ್ದರು. ನಂತರ ಸಕ್ರಿಯ ರಾಜಕಾರಣದಿಂದ ದೂರವೇ ಇದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು.

ಪ್ರಸಕ್ತ 81ರ ವಯಸ್ಸಿನಲ್ಲಿರುವ ಬಿ.ಎನ್‌. ಬಚ್ಚೇಗೌಡ ಅವರು ತಮ್ಮ ಆರಂಭದಲ್ಲಿ ಜನತಾ ಪರಿವಾರದ ನಾಯಕಾರಿ ಗುರುತಿಸಿಕೊಂಡಿದ್ದರು. ಅವರು 1978, 1985, 1994, 1999 ಮತ್ತು 2008ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಐದು ಬಾರಿ ಆಯ್ಕೆಯಾಗಿದ್ದಾರೆ. 1989, 2004 ಮತ್ತು 2013ರ ಚುನಾವಣೆಯಲ್ಲಿ ಸೋಲು ಕಂಡ ಅವರು ಜಗದೀಶ್‌ ಶೆಟ್ಟರ ಅವರ ಸಂಪುಟದಲ್ಲಿ ಮಂತ್ರಿಯೂ ಆಗಿದ್ದರು. 2014ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ಸಿನ ವೀರಪ್ಪ ಮೊಯ್ಲಿ ವಿರುದ್ಧ ಸೋತಿದ್ದ ಅವರು ಮುಂದೆ 2019ರಲ್ಲಿ ಗೆಲುವು ಸಾಧಿಸಿದ್ದರು.