ಶಿಗ್ಗಾವಿ: ಶಿಗ್ಗಾವಿ ಮತಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದರು. ಸಚಿವ ಜಮೀರ್ ಅಹಮದ್ ಖಾನ್ ಹಾಜರಿದ್ದರು. ಶಿಗ್ಗಾವಿ ಮತಕ್ಷೇತ್ರದಲ್ಲಿ ಖಾದ್ರಿ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದರು. ಈ ಬಾರಿ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಮತಗಳು ಗಣನೀಯ ಪ್ರಮಾಣದಲ್ಲಿದ್ದು ಒಂದು ವೇಳೆ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಬಹುದೊಡ್ಡ ತೊಡಕಾಗಿ ಪರಿಣಮಿಸುತ್ತಿತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿರುವುದರಿಂದ ಕೈ ಪಡೆ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಮಾನಗಳಲ್ಲಿ ಖಾದ್ರಿ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಯೋಗ್ಯ ಸ್ಥಾನಮಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.