ಬೆಂಗಳೂರು : ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಗ್ರೇಸ್‌ ಮಾರ್ಕ್ಸ್‌ ನೀಡಿದ್ದರ ಬಗ್ಗೆ ಸಿದ್ದರಾಮಯ್ಯ ಅಧಿಕಾರಗಳ ವಿರುದ್ಧ ಗರಂ ಆದರು ಎಂದು ಹೇಳಲಾಗಿದೆ.
ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಹೇಳಿದವರು ಯಾರು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗುವುದಿಲ್ಲವೇ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಿವಕುಮಾರ್​ ಮಾತಿಗೆ ಸಿದ್ದರಾಮಯ್ಯ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.
ಕೋವಿಡ್​ ಸಂದರ್ಭದಲ್ಲಿ 5-10 ಗ್ರೇಸ್ ಮಾರ್ಕ್ಸ್ ಕೊಡುತ್ತಿದ್ದೆವು. ಈಗ ಅದನ್ನು ಹೆಚ್ಚಿಸಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಗ ಕೋವಿಡ್​ ಇದೆಯಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮುಂದಿನ ವರ್ಷದಿಂದ ಎಸ್​ಎಸ್​ಎಲ್​​ಸಿ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈಗ ಕೊಟ್ಟಿರುವ ಗ್ರೇಸ್ ಮಾರ್ಕ್ಸ್​​​ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಮೇ 9ರಂದು ರಾಜ್ಯದಲ್ಲಿ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿತ್ತು. ಇದಕ್ಕೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು.