ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ”, ಹೊಸ ಆಸ್ತಿ ತೆರಿಗೆ ಪದ್ಧತಿ, ಆಸ್ತಿ ತೆರಿಗೆ ಖಾತಾ ವಿತರಣೆ; ಬೆಂಗಳೂರಿಗರ ಸಮಸ್ಯೆ ನಿವಾರಣೆಗೆ ಕ್ರಾಂತಿಕಾರಕ ಹೆಜ್ಜೆ: ಡಿಸಿಎಂ

ಬೆಂಗಳೂರು :
“ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ “ನಂಬಿಕೆ ನಕ್ಷೆ” ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಆಸ್ತಿ ತೆರಿಗೆ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

“ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಪಾರದರ್ಶಕ ಕಾರ್ಯಕ್ರಮಗಳನ್ನು ರೂಪಿಸಿದೆ.

*ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆ: “ನಂಬಿಕೆ ನಕ್ಷೆ”*

ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50X80 ವಿಸ್ತೀರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ಆನ್ ಲೈನ್ ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸಾರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ.

ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಇಂಜಿನಿಯರ್ ಗಳು ಸರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತನ್ನದೇ ಆದ ರೀತಿಯಲ್ಲಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಲಾಗುವುದು. ಆನ್ ಲೈನ್ ನಲ್ಲೆ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ.

ನಾವು ನಾಗರಿಕರನ್ನು ನಂಬಬೇಕು. ಪ್ರಮಾಣಿಕೃತ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕು. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70 ಸಾವಿರಕ್ಕೂ ಹೆಚ್ಚು ಸಲಹೆ ಗಳಲ್ಲಿ ಜನರು ತಮಗಾಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದ್ದರು. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಅವರ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ.

ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವಾರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು.

*ಹೊಸ ತೆರಿಗೆ ಪದ್ಧತಿ:*

2020ರಲ್ಲಿ ಬಿಜೆಪಿ ಸರ್ಕಾರ ತೆರಿಗೆ ಕಾಯ್ದೆ ವಿಚಾರವಾಗಿ ತಿದ್ದುಪಡಿ ಮಾಡಿದರು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾದವು. ʼಮನೆ ಬಾಗಿಲಿಗೆ ಬಂತು ಸರ್ಕಾರʼ ಕಾರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ 31-07-2024 ವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತೀರ್ಮಾನ ಮಾಡಿದ್ದೇವೆ. ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನುಶೇ. 200 ರಿಂದ ಶೇ 100 ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ವರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತೀರ್ಮಾನಿಸಿದ್ದೇವೆ.

ಪ್ರಸ್ತುತ ಇದ್ದ ಯುನಿಟ್ ವಿಸ್ತೀರ್ಣ ಮೌಲ್ಯ (UAV) ಆಸ್ತಿ ತೆರಿಗೆ ಪದ್ಧತಿಯನ್ನು 2008ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ವರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮಾರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ. ಈಗ ನಾವು 6 ವರ್ಗೀಕರಣಗಳನ್ನು ಮಾಡಿದ್ದು, ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪೂರ್ಣ ಖಾಲಿ ಜಮೀನುಗಳು ಎಂಬ ವರ್ಗೀಕರಣ ಮಾಡಲಾಗಿದೆ.

ಕಳೆದ ಬಾರಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು 2016ರಲ್ಲಿ. ಆಗ ವಸತಿ ಆಸ್ತಿಗಳಿಗೆ 20%, ವಸತಿಯೇತರ ಉದ್ದೇಶದ ಆಸ್ತಿಗಳಿಗೆ 25% ಏರಿಕೆಯಾಗಿತ್ತು. ಕಳೆದ ಎಂಟು ವರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ಚರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇ.10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು.

*ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು ಬಿಬಿಎಂಪಿ ಖಾತಾ ವಿತರಣೆ:*

ಯಾರೆಲ್ಲಾ ಆಸ್ತಿ ತೆರಿಗೆ ಪಾವತಿಗೆ ತಮ್ಮನ್ನು ತಾವು ಘೋಷಣೆ ಮಾಡಿಕೊಂಡಿಲ್ಲವೋ ಅವರಿಗೆ ಒಂದು ಅವಕಾಶ ನೀಡಲಾಗುತ್ತಿದೆ. ಈ ಮೂಲಕ ನಾಗರಿಕರು ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ಸಂಖ್ಯೆ ಮತ್ತು ಬಿಬಿಎಂಪಿ ಖಾತಾ ನೀಡಲಾಗುವುದು. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ ಎ ಖಾತಾ ನೀಡುತ್ತೇವೆ. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ ಬಿ ಖಾತಾ ನೀಡಲಾಗುವುದು.”

ಕುಡಿಯುವ ನೀರಿನ ದಂಧೆ ತಡೆದು, ಅಭಾವ ನೀಗಿಸಲು ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಸೋಮವಾರ ಹೇಳಿದ್ದಿಷ್ಟು:

“ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ. ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಕಳೆದ 30-40 ವರ್ಷಗಳಲ್ಲಿ ಇಂತಹ ಭೀಕರ ಬರಗಾಲವನ್ನು ನಾವು ನೋಡಿರಲಿಲ್ಲ. ಬೆಂಗಳೂರಿನಲ್ಲಿರುವ 13,900 ಕೊಳವೆ ಬಾವಿಗಳಲ್ಲಿ 6,900 ಕೊಳವೆ ಬಾವಿ ಬತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಖಾಸಗಿ ನೀರಿನ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದು ನೀರು ಪೂರೈಸಲು ಮುಂದಾಗಿದ್ದೇವೆ.

ನೀರಿನ ಪೂರೈಕೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ನಾವು ತಡೆದಿದ್ದೇವೆ. ಜನರಿಗೆ ಸೂಕ್ತ ದರದಲ್ಲಿ ನೀರು ಸಿಗುವಂತೆ ಮಾಡಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ ಮೆಂಟ್ ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಈಗಾಗಲೇ 1500ಕ್ಕೂ ಹೆಚ್ಚು ಟ್ಯಾಂಕರ್ ಗಳನ್ನು ನೋಂದಣಿ ಮಾಡಲಾಗಿದ್ದು, ಬೇರೆಯವರಿಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಿದ್ದೇವೆ. ಪೊಲೀಸ್, ಆರ್ ಟಿಓ, ಪಾಲಿಕೆ ಅವರಿಗೆ ಸೂಚನೆ ನೀಡಿ ನೋಂದಾಯಿತ ಟ್ಯಾಂಕರ್ ಗಳ ಮೇಲೆ ಸರ್ಕಾರದ ನಾಮಫಲಕ ಅಳವಡಿಸುವಂತೆ ಮಾಡುತ್ತೇವೆ. ಆಮೂಲಕ ಸರ್ಕಾರದ ನಿಯಂತ್ರಿತ ಕಾನೂನುಬಾಹಿರವಾಗಿ ಜನರಿಂದ ವಸೂಲಿ ಮಾಡುವುದನ್ನು ತಡೆಗಟ್ಟಲು ಮುಂದಾಗಿದ್ದೇವೆ. ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ.”

*ತಮಿಳುನಾಡಿಗೆ ನೀರು ಬಿಟ್ಟಿಲ್ಲ:*

ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೊಜನೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮರು ಕೊರೆಯುವುದು, ಹೊಸ ಕೊಳವೆ ಬಾವಿ ಕೊರೆಯಲು ತೀರ್ಮಾನಿಸಿದ್ದೇವೆ. ಕೈಗಾರಿಕೆ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲರಿಗೂ ನೀರು ಪೂರೈಸುತ್ತೇವೆ. ಇದ್ಕಾಗಿ ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ಭಾಗದ ಹಳ್ಳಿಗಳ ರೈತರ ಜತೆಗೂ ಒಪ್ಪಂದ ಮಾಡಿಕೊಂಡು ಅವರ ಕೊಳವೆ ಬಾವಿ ಬಳಸಿಕೊಳ್ಳಲಾಗುವುದು. ಕೆಲವು ಬುದ್ಧಿವಂತರು ಸ್ನಾನಕ್ಕೂ ನೀರಿಲ್ಲ ಎಂದು ಟ್ವೀಟ್ ಮಾಡುತ್ತಾರೆ. ಈ ಮಧ್ಯೆ ವಾರ್ಡ್, ವಲಯ ಮಟ್ಟದಲ್ಲಿ ಕಾಲ್ ಸೆಂಟರ್ ಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನ ಇತಿಹಾಸದಲ್ಲೇ ಇಷ್ಟು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ಯಾವ ಸರ್ಕಾರವೂ ಮಾಡಿರಲಿಲ್ಲ.

ಮಾಧ್ಯಮಗಳು ತೋರಿಸುತ್ತಾರೆ ಎಂದು ಬಿಜೆಪಿಯವರು ನೀರಿನ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಅನುದಾನ ಇಟ್ಟಿದ್ದ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದಿದ್ದು ಯಾಕೆ? ಕೇಂದ್ರ ಸರ್ಕಾರದ ಬಳಿ ಎಲ್ಲಾ ಸಂಸದರು ಹೋಗಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ನಾವು ತಮಿಳುನಾಡಿಗೆ ಬಿಡುಗಡೆ ಮಾಡುವ ನೀರನ್ನು ಬಿಡುತ್ತೇವೆ. ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರುವುದು ನಮ್ಮ ವಿರುದ್ಧವಲ್ಲ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿಸಲಿ.

ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಮೇಕೆದಾಟು ಯೋಜನೆ ಜಾರಿಗೆ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಾಗ ಗುರುತಿಸಲಾಗಿದೆ. ಬದ್ಧತೆ ಇರುವ ಕಾರಣಕ್ಕೆ ನಾವು ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಈ ಯೋಜನೆಗಳನ್ನು ಮಾಡಲೇಬೇಕು ಅಂತಲೇ ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ.

*ಬಿಜೆಪಿ ಆಂತರಿಕ ಧ್ವನಿಯನ್ನು ಅನಂತ ಕುಮಾರ್ ಹೆಗಡೆ ಬಹಿರಂಗಪಡಿಸಿದ್ದಾರೆ*

ಅನಂತಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಈ ಹೇಳಿಕೆಯಿಂದ ಅಂತಹ ಕಾಯ್ದುಕೊಳ್ಳಲು ಹೇಗೆ ಸಾಧ್ಯ? ಅವರು ಈ ರೀತಿ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಹಾಗಿದ್ದರೆ ಅವರನ್ನು ಬಿಜೆಪಿಯಲ್ಲಿ ಉಳಿಸಿಕೊಂಡಿರುವುದೇಕೆ? ಅವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ? ಅವರು ಕೇಂದ್ರದ ಮಾಜಿ ಸಚಿವರು, ಹಾಲಿ ಸಂಸದರು. ಅವರ ವಿರುದ್ಧ ಬಿಜೆಪಿ ಏನಾದರೂ ಕ್ರಮ ಕೈಗೊಂಡಿದ್ದಾರಾ? ಇಲ್ಲ. ಬಿಜೆಪಿ ಪಕ್ಷದ ಚಿಂತನೆ ಆಧಾರದ ಮೇಲೆ ಅವರ ಪಕ್ಷದ ಸಂಸದರು ಮಾತನಾಡುತ್ತಿದ್ದಾರೆ. ಡಿ.ಕೆ. ಸುರೇಶ್ ಅವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಆಗ್ರಹಿಸಿದಾಗ, ಆ ಬಗ್ಗೆ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಯಾಕೆ ಮಾತನಾಡಿದರು? ಈಗ ಈ ಬಗ್ಗೆ ಪ್ರಧಾನಮಂತ್ರಿಗಳು ಯಾಕೆ ಮಾತನಾಡುತ್ತಿಲ್ಲ. ಬಿಜೆಪಿಯ ಆಂತರಿಕ ಧ್ವನಿಯನ್ನು ಅನಂತ ಕುಮಾರ್ ಹೆಗಡೆ ಹೊರಹಾಕಿದ್ದಾರೆ. ಬಿಜೆಪಿಗೆ ದೇಶದ ಐಕ್ಯತೆ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ಅನಂತ ಕುಮಾರ್ ಹೆಗಡೆ ಅವರನ್ನು ಉಚ್ಛಾಟನೆ ಮಾಡಬಹುದಾಗಿತ್ತು. ಸಂವಿಧಾನ ನಮ್ಮ ಪಾಲಿನ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಆಗಿದೆ” ಎಂದರು.

*ಅಭ್ಯರ್ಥಿಗಳ ಆಯ್ಕೆ ಅಧಿಕಾರ ಹೈಕಮಾಂಡ್ ನಾಯಕರದ್ದು:*
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಕೇಳಿದಾಗ, “ಇಂದು ಸಂಜೆ ನಾವು ಸಭೆ ಮಾಡುತ್ತಿದ್ದು, ನಂತರ ಹೆಸರುಗಳನ್ನು ನಾವು ದೆಹಲಿಗೆ ನೀಡಬೇಕು. ಅಭ್ಯರ್ಥಿಗಳ ಪಟ್ಟಿ ಘೋಷಣೆ ಹಕ್ಕು ನಮಗಿಲ್ಲ. ಹೈಕಮಾಂಡ್ ನಾಯಕರು ಚುನಾವಣಾ ಸಮಿತಿ ಸಭೆ ನಡೆಸಿ ನಮ್ಮ ಪ್ರಸ್ತಾವನೆಯನ್ನು ಒಪ್ಪಬಹುದು ಅಥವಾ ನಿರಾಕರಿಸಬಹುದು. ಅವರದೇ ಆದ ಹೆಸರು ಸೇರಿಸಬಹುದು” ಎಂದು ತಿಳಿಸಿದರು.

*ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

ದೇವನಹಳ್ಳಿ ನಮ್ಮ ಬೆಂಗಳೂರಿನ ಭಾಗ್ಯದ ಹೆಬ್ಬಾಗಿಲು. ಕೆಂಪೇಗೌಡ ಆಳಿದ ನಾಡು. ಈ ಜಿಲ್ಲೆ ವಿಶ್ವದ ಜನರನ್ನು ಸ್ವಾಗತ ಮಾಡಿ, ಹಾಲು, ತರಕಾರಿ, ರೇಷ್ಮೆ, ಹೂವು ಹಣ್ಣು ನೀಡುತ್ತಿದ್ದೀರಿ.

ಅಜ್ಞಾನಿಗಳು ಹಾಳು ಮಾಡುತ್ತಾರೆ, ಜ್ಞಾನಿಗಳು ಲೋಕಕಲ್ಯಾಣಕ್ಕೆ ಕೆಲಸ ಮಾಡುತ್ತಾರೆ ಎಂದು ಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ಈಗ ಅಜ್ಞಾನಿಗಳು ಹಾಳು ಮಾಡಿರುವುದನ್ನು ನೀವು ನಾವು ಸೇರಿ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ.

ನಾವು ಜೀವನದಲ್ಲಿ ಯಶಸ್ಸು ಸಾಧಿಸಲು ಧರ್ಮರಾಯನ ಧರ್ಮತ್ವ ಇರಬೇಕು, ಕರ್ಣನ ದಾನತ್ವ, ಅರ್ಜುನನ ಗುರಿ, ಭೀಮನ ಬಲ, ವಿಧುರನ ನೀತಿ, ಕೃಷ್ಣನ ತಂತ್ರ ಇರಬೇಕು. ನಾವು ನಿಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಜಾಧ್ವನಿ ಮೂಲಕ ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡು ಹಿಡಿದು ನಿಮ್ಮ ಆಶೀರ್ವಾದದಿಂದ ನಾವು 136 ಕ್ಷೇತ್ರಗಳಲ್ಲಿ ಗೆದ್ದು ಸುಭದ್ರ ಸರ್ಕಾರ ರಚಿಸಿದ್ದೇವೆ.

ಚುನಾವಣೆಗೂ ಮುನ್ನ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನಾವು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿ ಆರು ತಿಂಗಳ ಒಳಗಾಗಿ ಅಂದರೆ ಕಳೆದ ಡಿಸೆಂಬರ್ ಒಳಗಾಗಿ ನಾವು ಈ ಯೋಜನೆ ಜಾರಿ ಮಾಡಿದೆವು. ಈ ಯೋಜನೆಗಳಿಗಾಗಿ 52 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದೇವೆ. ಆ ಮೂಲಕ ದೇಶಕ್ಕೆ ಮಾದರಿಯಾಗಿದ್ದೇವೆ.

ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್ ನಲ್ಲಿ 1.2೦ ಲಕ್ಷ ಕೋಟಿ ಹಣ ಮೀಸಲಿಟ್ಟಿದ್ದಾರೆ. ಆ ಮೂಲಕ ಕತ್ತಲಿನಿಂದ ಬೆಳಕಿನ ಕಡೆಗೆ, ಸುಳ್ಳಿನಿಂದ ಸತ್ಯದ ಕಡೆಗೆ ನಿಮ್ಮನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದ ಗೌರವ ಕಾಪಾಡುತ್ತಿದ್ದೇವೆ. ಕಳೆದ ಹತ್ತು ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಆಗಿರುವ ಕೆಲಸಗಳಿಗೆ ದೇಶವೇ ರಾಜ್ಯದತ್ತ ತಿರುಗಿ ನೋಡುತ್ತಿದೆ.

ನಮ್ಮ ಸರ್ಕಾರ ಈ ಹತ್ತು ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಮೂಲಕ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, ಗೃಹಲಕ್ಷ್ಮೀ ಯೋಜನೆ ಮೂಲಕ ಮನೆಯೊಡತಿಯರಿಗೆ ಪ್ರತಿ ತಿಂಗಳು 2 ಸಾವಿರ, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ ಅಕ್ಕಿ ಅದರಲ್ಲಿ 5 ಕೆ.ಜಿ ಅಕ್ಕಿಯ ಹಣ, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇದರಿಂದ ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಕನಿಷ್ಠ 5-6 ಸಾವಿರ ರೂಪಾಯಿ ಉಳಿತಾಯವಾಗುತ್ತಿದೆ.

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಮಕ್ಕಳ ಶಾಲಾ ಶುಲ್ಕ, ಎಲ್ಲಾ ಪದಾರ್ಥ ಬೆಲೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ರಕ್ಷಣೆಗೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನಮ್ಮ ಯೋಜನೆ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡಿದವು.

ನಾವು ಇತ್ತೀಚೆಗೆ ಬೆಂಗಳೂರಿನ ಒಂದೇ ಕಡೆ ನಾವು 36 ಸಾವಿರ ಬಡವರಿಗೆ ಮನೆಗಳನ್ನು ಕೊಟ್ಟಿದ್ದೇವೆ. ಈ ಮನೆಗಳ ಫಲಾನುಭವಿಗಳಿಗೆ ನಮ್ಮ ಸರ್ಕಾರ 5 ಲಕ್ಷ ಹಣವನ್ನು ವಿನಾಯಿತಿ ನೀಡಿ ಮನೆ ನೀಡುತ್ತಿದೆ. ಇಲ್ಲಿಗೆ ಬರುವ ಮುನ್ನ ನಾವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಬಡವರಿಗೆ ಅನುಕೂಲ ಮಾಡಿಕೊಡಲು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದೆವು. ಇದರಿಂದ ಬಡವರು, ಚಾಲಕರು, ಕೂಲಿ ಕಾರ್ಮಿಕರು ಹಸಿವಿನಿಂದ ಇರಬಾರದು ಎಂದು ಈ ಯೋಜನೆ ಮಾಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಪರಿಕಲ್ಪನೆ.

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮ, ಮಹಿಳೆಯರಿಗೆ ಸ್ತ್ರೀ ಶಕ್ತಿ, ದೇವರಾಜ ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ, ಮನಮೋಹನ್ ಸಿಂಗ್ ಅವರ ಕಾಲದಲ್ಲಿ ನರೇಗಾ ಕಾಯ್ದೆ, ಆಹಾರ ಭದ್ರತಾ ಕಾಯ್ದೆ ಮೂಲಕ ಉಚಿತ ಅಕ್ಕಿ ನೀಡಿದರು.

ನಾನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋದಾಗ ನನಗೆ ದೇವನಹಳ್ಳಿ ರಾಮಯ್ಯ, ಬಚ್ಚೇಗೌಡರು ಹಾಗೂ ಮುನಿನರಸಿಂಹಯ್ಯ ಅವರು ನೆನಪಿಗೆ ಬಂದರು. ನಾನು ಜಿಲ್ಲಾ ಮಂತ್ರಿಯಾಗಿದ್ದಾಗ ಅವರನ್ನು ಕರೆದು ಸಭೆ ಮಾಡಿದೆ. ವಿಮಾನ ನಿಲ್ದಾಣಕ್ಕೆ ಈ ಭಾಗದ ರೈತರು ಜಾಗ ಬಿಟ್ಟುಕೊಟ್ಟು ದೇಶಕ್ಕೆ ಸೇವೆ ಮಾಡಿದಿರಿ. ನಿಮ್ಮೆಲ್ಲರಿಗೂ ಸಾಷ್ಟಾಂಗ ನಮನಗಳು. ಬಿಜೆಪಿ ಅವರು ಅಧಿಕಾರದಲ್ಲಿ ಇದ್ದಾಗ ಕೇವಲ ಸುಳ್ಳು ಹೇಳಿದರು ಲೂಟಿ ಮಾಡಿದರು.

ಕುವೆಂಪು ಅವರು ನಮ್ಮ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿದರು. ಬಿಜೆಪಿಯ ಸಂಸತ್ ಸದಸ್ಯ ಅನಂತ ಕುಮಾರ್ ಹೆಗಡೆ ಅವರು ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳಿದ್ದಾರೆ. ಇದಕ್ಕೆ ಅವಕಾಶ ನೀಡಬೇಕಾ? ನೀವು ಮನೆ ಮನೆಗೆ ಹೋಗಿ, ನಮಗೆ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಎಷ್ಟು ಮುಖ್ಯವೋ ಸಂವಿಧಾನವೂ ಅಷ್ಟೇ ಮುಖ್ಯ ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿದೆ.

ಬಿಜೆಪಿ ಅವರದ್ದು ಕೇವಲ ಸುಳ್ಳಿನ ಕಂತೆ. ಅವರ ಜತೆ ಜೆಡಿಎಸ್ ನಾಯಕರು ಸೇರಿಕೊಂಡು ತಬ್ಬಾಡುತ್ತಿದ್ದಾರೆ. ಬಿಜೆಪಿ ಅವರು 15 ಲಕ್ಷ ನೀಡುತ್ತೇವೆ ಎಂದು ಜನಧನ ಖಾತೆ ತೆರೆಸಿದರು. ಆ ಖಾತೆಗಳಿಗೆ ನಾವು ಪ್ರತಿ ತಿಂಗಳು 2 ಸಾವಿರ ಹಣ ಹಾಕುತ್ತಿದ್ದೇವೆ. ಮುನಿಯಪ್ಪನವರು ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೇಳಿದರೆ, ಕೇಂದ್ರ ಸರ್ಕಾರ ನಿರಾಕರಿಸಿತು. ಅದಕ್ಕೆ ಸಿದ್ದರಾಮಯ್ಯ ಅವರಕು ಆ ಅಕ್ಕಿ ಬೆಲೆಯ ಹಣವನ್ನು ನಿಮ್ಮ ಖಾತೆಗೆ ವರ್ಗಾವಣೆ ಮಾಡುತ್ತಿದೆ.

ಕೇಂದ್ರ ಬಿಜೆಪಿ ಸರ್ಕಾರ ನಮಗೆ ಸೂಕ್ತವಾಗಿ ಅನುದಾನ ನೀಡಲಿಲ್ಲ. 27 ಜನ ಸಂಸದರಿದ್ದರೂ ಜನರ ಪರವಾಗಿ ಕೇಂದ್ರ ಸರ್ಕಾರದ ಬಳಿ ಒಂದು ದಿನವೂ ಧ್ವನಿ ಎತ್ತಲಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದಕ್ಕೆಲ್ಲಾ ನೀವು ಉತ್ತರ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ನೀವು ಇಲ್ಲಿ ಬಟನ್ ಒತ್ತಿದ ತಕ್ಷಣ ಅದರ ಶಬ್ಧ ದೆಹಲಿಗೆ ಕೇಳಿಸಬೇಕು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು.

ಬೆಂಗಳೂರು ಗ್ರಾಮಾಂತರ, ರಾಮನಗರ, ಹೊಸಕೋಟೆ, ನೆಲಮಂಗಲ ಸೇರಿದಂತೆ ಎಲ್ಲವೂ ನಮಗೆ ಹೆಬ್ಬಾಗಿಲು. ಈ ಭಾಗದ ಅಭಿವೃದ್ಧಿಗೆ ನಾವು ಬದ್ಧವಾಗಿದ್ದೇವೆ. ನೀವೆಲ್ಲರೂ ಬೆಂಗಳೂರಿನವರೇ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು. ದೇವನಹಳ್ಳಿಗೆ ಮೆಟ್ರೋ ಬರಬೇಕು ಎಂದು ಮನವಿ ಮಾಡಿದ್ದಾರೆ. ನಾನು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವನಾಗಿ ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ಮಾಡಿ ಡಿಪಿಆರ್ ಸಿದ್ಧಪಡಿಸುತ್ತೇವೆ. ಈ ಭಾಗದ ಅಭಿವೃದ್ಧಿಗೆ ನಾವು ಬದ್ಧವಾಗಿದ್ದೇವೆ.

ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ಕುಮಾರಣ್ಣ ತೆನೆ ಹೊತ್ತ ಮಹಿಳೆಯನ್ನು ನೂಕಿ ಕಮಲದ ಹಿಡಿದರು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕರ್ನಾಟಕ ರಾಜ್ಯ ಸಮೃದ್ಧಿಯಾಯಿತು. ಕರ್ನಾಟಕ ರಾಜ್ಯ ಪ್ರಬುದ್ಧವಾಯಿತು.