
ಬೆಳಗಾವಿ :
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟೆಗೆ ತರುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ನಿರ್ದೇಶನ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಆಗ್ರಹಿಸಿದರು.
2023 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ರಾಜ್ಯದ ಬೆಳಗಾವಿ, ಮೈಸೂರು ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯಗಳನ್ನುಸ್ಥಾಪಿಸಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಮಾಡಿದರೂ ಕೂಡಾ ರಾಜ್ಯ ಸರ್ಕಾರ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು.
ಈಗಾಗಲೇ ಬೆಂಗಳೂರಿನಲ್ಲಿಇರುವ ವಿಶೇಷ ನ್ಯಾಯಾಲಯದಲ್ಲಿ ಬಹಳ ಒತ್ತಡವಿದ್ದು ಕಳೆದ 8-9 ವರ್ಷಗಳ ಹಳೆಯ ಪ್ರಕರಣಗಳು ಬಾಕಿ ಇರುವುದರಿಂದ ಹೊಸ ನ್ಯಾಯಾಲಯಗಳ ಸ್ಥಾಪಿಸಲು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ ಆದರೆ ರಾಜ್ಯ ಸರ್ಕಾರ ಅದನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದರು.
ರಾಜ್ಯ ಸರ್ಕಾರದ ನಿರಾಸಕ್ತಿಯ ಪರಿಣಾಮ ರಾಷ್ಟ್ರ ವಿರೋಧಿ ಶಕ್ತಿಗಳು ಬಹಳಷ್ಟು ಕಡೆ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ರಾಮನಗರದ ಬಿಡದಿಯಲ್ಲಿರುವ ಆಟೋಮೊಬೈಲ್ ಉತ್ಪಾದನಾ ಕಂಪನಿಯ ಗೋಡೆಯ ಮೇಲೆ ಬರೆಯಲಾದ “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳು ಮತ್ತು ಇತ್ತೀಚೆಗೆ ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ಹತ್ಯೆ, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆದಿರುವುದು ಇಂತಹ ಘಟನೆಗಳನ್ನು ಹತೋಟೆಗೆ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೇಸ್ ಸಂಪೂರ್ಣ ಬಹುಮತದಿಂದ ಗೆದ್ದರೂ ಕೂಡ ಸುಭದ್ರ ಆಡಳಿತ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಚಿನ್ನದ ಕಳ್ಳಸಾಗಣೆಯಲ್ಲಿ ರಾಜ್ಯ ಸರ್ಕಾರದ ಸಚಿವರು ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ ಮತ್ತು ಕಾಂಗ್ರೆಸ್‌ನ ಹಿರಿಯ ಸಚಿವರೇ ವಿಧಾನಸಭೆಯಲ್ಲಿ 48 ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಸ್ವತಹ ನನ್ನ ಮೇಲೆಯೂ ಕೂಡಾ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಅವಲತ್ತು ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೆಂದರೇ ಸಾಮಾನ್ಯ ಜನರಿಗೆ ರಕ್ಷಣೆ ಕೋಡಲು ಹೇಗೆ ಸಾಧ್ಯ. ಈ ಎಲ್ಲ ಘಟನೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಒಂದು ಸ್ಪಷ್ಟವಾದ ನಿರ್ದೇಶನ ನೀಡಬೇಕು ಮತ್ತು ವಿಶೇಷ ನ್ಯಾಯಾಲಯಗಳ ಸ್ಥಾಪನೆಯಾಗಬೇಕು ಹೂಗೂ ಕಾನೂನು ಸುವ್ಯವಸ್ಥೆಯನ್ನು ಹತೋಟೆಗೆ ತರಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು..