ತುಮಕೂರು : ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ದಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ತುಮಕೂರಿನಲ್ಲಿ ಭಾನುವಾರ ತಮ್ಮ ಕಚೇರಿ ಉದ್ಘಾಟಿಸಿ ಮಾತನಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಹಾಗೂ ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ದಗಂಗಾ ನಿಲ್ದಾಣ ಎಂದು ಹೆಸರಿಡುವಂತೆ ಪತ್ರಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಲಾಗಿದೆ. ಜತೆಗೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಅವರು ಸಮ್ಮತಿಸಿದ್ದಾರೆ ಎಂದು ಹೇಳಿದರು.

ಅಮೃತ್‌ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು 2000 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ 61 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರ ಈ ಕೆಲಸ ಪ್ರಾರಂಭವಾಗಲಿದೆ ಎಂದರು.