ಬೆಂಗಳೂರು:
ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ. ರವಿ ಅವರು ತಾವು ಸಲ್ಲಿಸಿದ್ದ ಮಹಾಪ್ರಬಂಧ ‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ’ದ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಜೆ.ಸುರೇಶ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ. ಪಿಎಚ್‌ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾಪ್ರಬಂಧವನ್ನು ಸಲ್ಲಿಕೆ ಮಾಡಿದ್ದಾರೆ.

ಪಿಎಚ್ ಡಿ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದರೊಂದಿಗೆ ಸಿಟಿ ರವಿ ಅವರ ಪಿಎಚ್​ಡಿ ಅಂತಿಮ ಹಂತಕ್ಕೆ ಬಂದಂತಾಗಿದೆ.

ಮೌಖಿಕ ಪರೀಕ್ಷೆಯನ್ನು ಯಶಸ್ವಿಗೊಳಿಸಿರುವ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕರಾಮುವಿ) ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಇದೀಗ ಅದೇ ವಿವಿಯಲ್ಲಿ ಪಿಎಚ್​ಡಿ ಪದವಿ ಪಡೆದುಕೊಳ್ಳುತ್ತಿರುವುದು ವಿಶೇಷ. ಸಿಟಿ ರವಿ ಅವರು ಪಿಎಚ್​ಡಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ್ದರು. ವಿಧೇಯ ವಿದ್ಯಾರ್ಥಿಯಂತೆ ದೇವೇಗೌಡರ ಬಳಿ ಸಂಶೋಧನಾ ಮಾಹಿತಿ ಪಡೆದುಕೊಂಡಿದ್ದರು. ಈ ಬಗ್ಗೆ ಸ್ವತಃ ಸಿಟಿ ರವಿ ಅವರೇ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.