ಲಖನೌ : “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

“ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು.

ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿದೆವು. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದೇವೆ. ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಘೋಷಿಸಿದೆವು.

ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆದಲ್ಲೂ 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ.

*ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ:*

ಬಿಜೆಪಿ 10 ವರ್ಷಗಳ ಹಿಂದೆ ಕಪ್ಪು ಹಣ ತಂದು ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ. ಕರ್ನಾಟಕದಲ್ಲಿ 6.5 ಕೋಟಿ ಜನಸಂಖ್ಯೆ ಇದ್ದು, ನಮ್ಮ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ಇದೆ. ಆ ಪೈಕಿ 52 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳ ಜಾರಿಗೆ ಮೀಸಲಿಟ್ಟಿದ್ದೇವೆ. ಇನ್ನು 1.20 ಲಕ್ಷ ಕೋಟಿಯಷ್ಟು ಹಣವನ್ನು ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ.

ಬಿಜೆಪಿ ಕೇವಲ ಭಾವನಾತ್ಮಕ ರಾಜಕೀಯ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಜನಸಾಮಾನ್ಯರ ಹಸಿವು ನೀಗಿಸಲು, ಅವರ ಸಂಕಷ್ಟಗಳಿಗೆ ಪರಿಹಾರ ನೀಡಲು ಇಂತಹ ಒಂದೇ ಒಂದು ಯೋಜನೆ ನೀಡಿದ್ದೀರಾ ಎಂದು ಪ್ರಧಾನಮಂತ್ರಿಗಳು, ಅವರ ಪಕ್ಷದ ನಾಯಕರು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಕೇಳಬಯಸುತ್ತೇನೆ.

ಯುಪಿಎ ಅವಧಿಯಲ್ಲಿ ಹಸಿವು ನೀಗಿಸಲು ಆಹಾರ ಭದ್ರತಾ ಕಾಯ್ದೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ನರೇಗಾ, ಎಲ್ಲರಿಗೂ ಶಿಕ್ಷಣ ಸಿಗಲು ಶೈಕ್ಷಣಿಕ ಹಕ್ಕು, ಮಾಹಿತಿ ಹಕ್ಕು ಜಾರಿ ಮಾಡಲಾಗಿತ್ತು. ಇಂತಹ ಯಾವುದಾದರೂ ಒಂದು ಯೋಜನೆಯನ್ನು ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಕೊಟ್ಟಿದೆಯೇ? ಅದು ಒಂದು ಯೋಜನೆ ನೀಡಿದ್ದರೂ ನಾವು ಜನರ ಮುಂದೆ ಹೋಗಿ ಮತ ಕೇಳುವ ಪ್ರಮೇಯವೇ ಇರುತ್ತಿರಲಿಲ್ಲ. ಜನರ ಕಷ್ಟಗಳಿಗೆ ಪರಿಹಾರ ನೀಡಲು ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

*ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗಲಿವೆ:*

ಕಾಂಗ್ರೆಸ್ ಐದು ನ್ಯಾಯ ಯೋಜನೆಗಳ ಮೂಲಕ ಒಟ್ಟಾರೆ 25 ಗ್ಯಾರಂಟಿಗಳನ್ನು ಪ್ರಕಟಿಸಿದ್ದು, ಮಹಾಲಕ್ಷ್ಮಿ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ ಒಂದು ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ, ನರೇಗಾ ಕೂಲಿ 400 ರೂ.ಗೆ ಏರಿಕೆ, ನಗರ ಪ್ರದೇಶದಲ್ಲಿ ಉದ್ಯೋಗ ಖಾತ್ರಿ, 25 ಲಕ್ಷ ವರೆಗಿನ ಆರೋಗ್ಯ ವಿಮೆ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿದ್ದು, ನಾವು ಪ್ರಣಾಳಿಕೆಯಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ನಾವು ಬಸವಣ್ಣನ ನಾಡಿನಿಂದ ಬಂದಿದ್ದು, ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ.

ಮೋದಿ ಅವರು ಮಂಗಳಸೂತ್ರದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ಇತ್ತು. ಈಗ 10 ವರ್ಷಗಳ ನಂತರ ಅದು 75 ಸಾವಿರಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಂಗಳಸೂತ್ರ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಗಳ ಹೇಳಿಕೆ ನಿಜಕ್ಕೂ ಖಂಡನೀಯ.

*ಭಾವನಾತ್ಮಕ ವಿಚಾರವಾಗಿ ಬಿಜೆಪಿ ರಾಜಕೀಯ:*

ಉತ್ತರ ಪ್ರದೇಶದಲ್ಲಿ 6 ಸಾವಿರ ಹುದ್ದೆಗಳ ನೇಮಕಾತಿಗೆ 60 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಇದೇ ದೊಡ್ಡ ಸಾಕ್ಷಿಯಾಗಿದೆ. ಈ ರಾಜ್ಯದಿಂದ ಯುವಕರು ಉದ್ಯೋಗ ಹುಡುಕಿಕೊಂಡು ಬೆಂಗಳೂರು ಹಾಗೂ ಇತರೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಉತ್ತರ ಪ್ರದೇಶ ಅತ್ಯುತ್ತಮ ರಾಜ್ಯ. ಆದರೆ ಈ ರಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ವಿಫಲವಾಗಿದ್ದಾರೆ. ಕೇವಲ ಭಾವನಾತ್ಮಕ ವಿಚಾರಗಳ ಮೂಲಕ ರಾಜಕೀಯ ಮಾಡಲಾಗುತ್ತಿದೆ. ಕರ್ನಾಟಕದ ಸಂಸದರಾದ ಅನಂತಕುಮಾರ್ ಹೆಗಡೆ ಅವರು ಬಿಜೆಪಿ ಪಕ್ಷಕ್ಕೆ 400 ಸೀಟುಗಳನ್ನು ಕೊಟ್ಟರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಮೋದಿ ಅವರು ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಜಾಹೀರಾತು ನೀಡುತ್ತಿದ್ದಾರೆ. ಸಂವಿಧಾನದ ಬಗ್ಗೆ ಅವರಿಗೆ ಬದ್ಧತೆ ಇದ್ದರೆ ಅವರು ಸಂವಿಧಾನ ಬದಲಾವಣೆ ವಿಚಾರ ಪ್ರಸ್ತಾಪ ಮಾಡಿದ ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಿಲ್ಲ ಯಾಕೆ?

ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಆದ್ಯತೆ ನೀಡಿದ್ದು, ಜಾತಿ ಗಣತಿ ಮೂಲಕ ಎಲ್ಲಾ ಸಮುದಾಯಗಳ ಸ್ಥಿತಿ ಅರಿತು ಅವರಿಗೆ ಜನಸಂಖ್ಯೆ ಅನುಗುಣವಾಗಿ ಅನುದಾನ ನೀಡಲು ನಿರ್ಧರಿಸಿದೆ. ಈಗಾಗಲೇ ಕರ್ನಾಟಕದಲ್ಲಿ ಇದಕ್ಕಾಗಿ ಕಾನೂನು ತಂದು ಪರಿಶಿಷ್ಟರಿಗೆ ಜನಸಂಖ್ಯೆ ಅನುಗುಣವಾಗಿ 39 ಸಾವಿರ ಕೋಟಿ ಅನುದಾನ ನೀಡಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಿಎಂ ಅವರಿಗೆ ಜಾತಿ ಗಣತಿ ಕಂಡರೆ ಭಯವೇಕೆ? ಎಲ್ಲಾ ಸಮುದಾಯಗಳು ತಮ್ಮ ಹಕ್ಕನ್ನು ಪಡೆಯಬೇಕು.

ಮೋದಿ ಅವರು ಗುಜರಾತ್ ಮಾಡೆಲ್ ಬಗ್ಗೆ ಮಾತನಾಡುತ್ತಾರೆ. ಉತ್ತರ ಪ್ರದೇಶವನ್ನು ಗುಜರಾತ್ ನಂತೆ ಯಾಕೆ ಅಭಿವೃದ್ಧಿ ಮಾಡಿಲ್ಲ? ಅಖಿಲೇಶ್ ಯಾದವ್ ಅವರ ಕಾಲದಲ್ಲಿ ಈ ರಾಜ್ಯದಲ್ಲಿ ಆಗುತ್ತಿದ್ದ ಅಭಿವೃದ್ಧಿ ಕಾರ್ಯಗಳು ಈಗ ನಡೆಯುತ್ತಿಲ್ಲ. ಈ ರಾಜ್ಯದ ಅಧಿಕಾರಿಗಳು, ಉದ್ಯಮಿಗಳು, ಕಾರ್ಯಕರ್ತರ ಜತೆ ನಾನು ಚರ್ಚೆ ಮಾಡಿದ್ದು, ಎಲ್ಲರೂ ಅಖಿಲೇಶ್ ಯಾದವ್ ಅವರ ಆಡಳಿತವನ್ನು ಸ್ಮರಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಮತ್ತೆ ಅಖಿಲೇಶ್ ಯಾದವ್ ಸರ್ಕಾರ ರಚನೆ ಮಾಡಲಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರರಲಿದ್ದು, ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರ ಎನ್ ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಇಂಡಿಯಾ ಮೈತ್ರಿಕೂಟ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಲಿದೆ. ಈ ದೇಶ ಹಾಗೂ ಜನರ ಕಲ್ಯಾಣಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ.

ಸಂವಿಧಾನವೇ ನಮ್ಮ ಪಾಲಿನ ಭಗವದ್ಗೀತೆ, ಬೈಬಲ್ ಹಾಗೂ ಕುರಾನ್ ಆಗಿದೆ. ಎಲ್ಲರೂ ಒಟ್ಟಾಗಿ ನಮ್ಮ ಪವಿತ್ರ ಗ್ರಂಥ ಸಂವಿಧಾನವನ್ನು ರಕ್ಷಣೆ ಮಾಡೋಣ.

ಕರ್ನಾಟಕದ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲೂ ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಘೋಷಿಸಿದ್ದು, ಈ ಯೋಜನೆಗಳನ್ನು ನಾವು ಜಾರಿ ಮಾಡಿಯೇ ಮಾಡುತ್ತೇವೆ.

*ಪ್ರಶ್ನೋತ್ತರ:*

ಇಂಡಿಯಾ ಮೈತ್ರಿಕೂಟ ಎಷ್ಟು ಕ್ಷೇತ್ರ ಗೆಲ್ಲಲಿದೆ ಎಂದು ಕೇಳಿದಾಗ, “ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಎನ್ ಡಿಎ ಮೈತ್ರಿಕೂಟ ಸುಮಾರು 200 ಆಸುಪಾಸಿನಲ್ಲಿ ಗೆಲ್ಲಲಿದೆ” ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ವಿಚಾರವಾಗಿ ಕೇಳಿದಾಗ, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ಪ್ರಕರಣ ಇಡೀ ದೇಶವೇ ತಲೆತಗ್ಗಿಸುಂವತೆ ಮಾಡಿದೆ. ಬಿಜೆಪಿ ಸ್ನೇಹಿತರು, ಯ ಎನ್ ಡಿಎ ಮೈತ್ರಿಕೂಟದ ಪಕ್ಷದ ಸಂಸದನಿಂದ ಈ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಮೋದಿ ಅವರು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆ. ಕೇಂದ್ರ ಸರ್ಕಾರ ಆತನಿಗೆ ಪಾಸ್ ಪೋರ್ಟ್ ವಿತರಣೆ ಮಾಡಿದೆ. ನಾವು ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು, ಆತನನ್ನು ಬಂಧಿಸುತ್ತೇವೆ” ಎಂದು ತಿಳಿಸಿದರು.

ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಪ್ರಧಾನ ಮಂತ್ರಿಗಳು ಮುಸ್ಲಿಂ ಮೀಸಲಾತಿ ವಿಚಾರವಾಗಿ ಮಾಡುತ್ತಿರುವ ಆರೋಪ ಆಧಾರರಹಿತವಾಗಿದೆ. ಮುಸಲ್ಮಾನರಿಗೆ ಕಳೆದ 30-40 ವರ್ಷಗಳಿಂದ ಮೀಸಲಾತಿ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕೆ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವೆಲ್ಲರೂ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲಾ ವರ್ಗದ ಜನರ ರಕ್ಷಣೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಹೀಗಾಗಿ ನಾವು ಎಲ್ಲಾ ವರ್ಗದ ಜನರ ರಕ್ಷಣೆ ಮಾಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದರು.