ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿ ಮಾಡುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶಗಳನ್ನು ಸಂಗ್ರಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ ಅವರು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿ ಸಂಬಂಧ ನಂಬಲರ್ಹ ದಾಖಲೆಗಳು ಹಾಗೂ ದತ್ತಾಂಶ ಸಂಗ್ರಹಿಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಮೂರು ತಿಂಗಳಲ್ಲಿ ಆಯೋಗ ವರದಿ ನೀಡಲಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದೆ ಎಂದು ಅವರು ತಿಳಿಸಿದರು.
ಆಯೋಗವು ತನ್ನ ವರದಿಯನ್ನು ಸಲ್ಲಿಸುವವರೆಗೆ ಮುಂಬರುವ ಎಲ್ಲಾ ನೇಮಕಾತಿಗಳನ್ನು ಕನಿಷ್ಠ ಮೂರು ತಿಂಗಳ ಕಾಲ ಮುಂದೂಡಲು ಸಂಪುಟ ನಿರ್ಧರಿಸಿದೆ. ಇಂದಿನಿಂದ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸುವುದಿಲ್ಲ. ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ(SC, ST for reservation) ಒಳಗಡೆಯೇ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಒಪ್ಪಿಗೆ ನೀಡಿತ್ತು. ಸರ್ಕಾರಿ ಉದ್ಯೋಗಗಳಲ್ಲಿ ಯಾವ ಜಾತಿ, ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಕೋರ್ಟ್‌ ರಾಜ್ಯಗಳ ವಿವೇಚನೆಗೆ ನೀಡಿದೆ.