ಬೆಳಗಾವಿ: ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆಗೆ ನಿರಂತರ ಸಭೆ ನಡೆಸಬೇಕು. ಯಾವುದೇ ಸಮಸ್ಯೆಗಳು ಎದುರಾದಲ್ಲಿ ಅಧಿಕಾರಿಗಳು ತಕ್ಷಣವೇ ಪರಿಹಾರಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಮಾ.29) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರ ನಿರ್ವಹಣೆಗೆ ಯಾವುದೇ ರೀತಿಯ ಅನುದಾನದ ಕೊರತೆ ಇರುವುದಿಲ್ಲ. ಬರಪೀಡಿತ ಪ್ರದೇಶಗಳನ್ನು ಗುರುಸಿತಿಸಿ, ಜನ–ಜಾನುವಾರಿಗೆ ನೀರು, ಮೇವಿನ ಲಭ್ಯತೆ ನೋಡಿಕೊಂಡು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ. ನೆರೆಯ ಜಲಾಶಯಗಳಲ್ಲಿ ನೀರಿನ ಲಭ್ಯತೆಯಿದಲ್ಲಿ ಅಗತ್ಯಕ್ಕೆ ತಕ್ಕಂತೆ ನೀರು ಬಿಡುಗಡೆ ಮಾಡಬೇಕು.

ಹಿಪ್ಪರಗಿ ಬ್ಯಾರೇಜ್ ನಿಂದ ಕಕ್ಕಮರಿ, ಜುಂಜರವಾಡ ಗ್ರಾಮಗಳಿಗೆ ಕುಡಿಯುವ ನೀರು ಬಿಡುಗಡೆ ಅತ್ಯಗತ್ಯವಿದ್ದು ಕೂಡಲೇ 100 ಕ್ಯೂಸೆಕ್ ನೀರು ಬಿಡುಗಡೆಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ನದಿಯ ಬದಿಯಲ್ಲಿರುವ ಎಲ್ಲ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತಗೊಳಿಸಬೇಕು. ಕುಡಿಯುವ ನೀರಿನ ಅಗತ್ಯವಿದ್ದ ಪ್ರದೇಶಗಳಿಗೆ ಕೂಡಲೇ ನೀರು ಬಿಡುಗಡೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಅಥಣಿ ಕಾಗವಾಡ ಭಾಗದಲ್ಲಿ ಕುಡಿಯುವ ನೀರು ಪೂರೈಕೆಗೆ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಜಲಾಶಯಗಳಿಂದ ನೀರು ಬಿಡುಗಡಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಸಿಂಗಲ್-ಫೇಸ್ ಮೂಲಕ ವಿದ್ಯುತ್ ನೀಡಬೇಕು. ಮನೆಗಳಿಗೆ ವಿದ್ಯುತ್ ಕಡಿತವಾಗಬಾರದು. ಕುಡಿಯುವ ನೀರು ಪೂರೈಕೆಗೆ ಪ್ರತಿ ದಿನ ಒಂದು ಗಂಟೆ ತ್ರಿ-ಫೇಸ್ ಮೂಲಕ ವಿದ್ಯುತ್ ಒದಗಿಸಬೇಕು ಎಂದು ಎಸ್. ಪಿ ಭೀಮಾಶಂಕರ ಗುಳೇದ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ್ ಕೋಣಿ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.