ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ. ಈ ಮೂಲಕ ಕರಾವಳಿಯ ಮೂರು ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಇದೀಗ ರಣಕಹಳೆ ಮೊಳಗಿಸಲು ಮುಂದಾಗಿದೆ.
ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಮತ್ತು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಈ ಸಮಾವೇಶ ಆಯೋಜಿಸಲಾಗುತ್ತಿದೆ.
ಮಂಗಳೂರಿನಲ್ಲಿ ಬ್ರಿಜೇಶ್ ಚೌಟ, ಉಡುಪಿ- ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು ಇವರ ಪರ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಬಂಗ್ರೆಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಮೋದಿ ಈ ಹಿಂದೆ ಭೇಟಿ ನೀಡಿದಾಗ ಸೇರಿದ್ದ ಜನರ ಸಂಖ್ಯೆಯನ್ನು ಹಿಂದಿಕ್ಕಿ ಈ ಸಲ ಜನಸಾಗರ ಸೇರಿಸಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ. ಮೋದಿ ಪ್ರಚಾರ ಕೇಸರಿ ಪಾಳಯದಲ್ಲಿ ಇನ್ನಿಲ್ಲದ ಉತ್ಸಾಹಕ್ಕೆ ಕಾರಣವಾಗಿದೆ.
ಯೋಗಿಯೂ ಕರಾವಳಿಗೆ : ಎಪ್ರಿಲ್ 20 ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕದ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮೈಸೂರು ಭಾಗದಲ್ಲಿ ಅವರ ಪ್ರಚಾರ ಸಭೆ ಆಯೋಜಿಸಲಾಗುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ ಎಪ್ರಿಲ್ 20ರಂದು ಯೋಗಿ ಆದಿತ್ಯನಾಥ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.