ಮೂಡಲಗಿ:
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿ ಹಿಡಿಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸಾಬೀತಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ಸ್ವಾಗತಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು, ದೇಶದ ಸಮಗ್ರತೆ, ಅಖಂಡತೆಗೆ ಧಕ್ಕೆಯಾಗಿದ್ದ 370-ವಿಶೇಷ ಸ್ಥಾನಮಾನ ರದ್ದು ಮಾಡಲು ಜನಸಂಘದ ನಾಯಕ ಶ್ಯಾಮ ಪ್ರಸಾದ್ ಮುಖರ್ಜಿಯವರು ಪ್ರಯತ್ನ ಆರಂಭಿಸಿದ್ದರು. 2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಶ್ಯಾಮ ಪ್ರಸಾದ್ ಮುಖರ್ಜಿಯವರ ಆ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಕಾರಗೊಳಿಸಿದರು.

ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ 30ರ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಜಮ್ಮು- ಕಾಶ್ಮೀರ, ಲಡಾಖ್‌ನ ಸರ್ವತೋಮುಖ ಅಭಿವೃದ್ಧಿ ಹಾಗೂ ಭಾರತದ ಏಕತೆಯ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ತೀರ್ಮಾನ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈರಣ್ಣ ಕಡಾಡಿ ಅವರು ಅಭಿನಂದನೆ ತಿಳಿಸಿದ್ದಾರೆ.