ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಅದರಲ್ಲೂ ಕರಾವಳಿಯಲ್ಲಿ ಅವರಿಗೆ ಬಹುದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ. ರಘುಪತಿ ಭಟ್ ಅವರಿಗೆ ಟಿಕೆಟ್ ನೀಡಬೇಕಾಗಿತ್ತು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ವ್ಯಕ್ತಪಡಿಸಿದ್ದು ಜನರ ಕೈಗೆ ಸುಲಭವಾಗಿ ಸಿಗುವ ಪಕ್ಷನಿಷ್ಠ ರಘುಪತಿ ಭಟ್ ಒಬ್ಬ ಉತ್ತಮ ಜನಪ್ರತಿನಿಧಿ ಎಂಬ ಸದಭಿಪ್ರಾಯ ವ್ಯಕ್ತವಾಗಿದೆ.

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪರವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಬಿಜೆಪಿ(BJP) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್‌ ಕಣಕ್ಕಿಳಿದಿದ್ದರು. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು. ಹಾಗೂ ಬಿಜೆಪಿ ಹಿರಿಯ ಮುಖಂಡರಿಂದ ಅವರ ಮನವೊಲಿಸುವ ಪ್ರಯತ್ನವೂ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ಕಣದಲ್ಲಿದ್ದಾರೆ. ಈ ಹಿನ್ನಲೆ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪಕ್ಷದ ಸೂಚನೆ ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಘುಪತಿ ಭಟ್ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಹೈ ಕಮಾಂಡ್ ರಘುಪತಿ ಭಟ್​ಗೆ ಟಿಕೆಟ್ ನೀಡಿರಲಿಲ್ಲ. ಡಾ.ಧನಂಜಯ ಸರ್ಜಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ರಘಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.