ಬೆಂಗಳೂರು:
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ 5 ಸಾವಿರಕ್ಕೆ ಹೆಚ್ಚಳ ಮಾಡಿದ್ದು, ಜ.1ರಿಂದಲೇ ಹೆಚ್ಚಳದ ಪ್ರಯೋಜನ ದೊರೆಯಲಿದೆ.

ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರ ಜತೆ ಶುಕ್ರವಾರ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕ‌ರ್, ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 26, 000ರೂ. ನಿಂದ 32,000 ರೂ. ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಲಾಭ ಸಮಾನವಾಗಿ ದೊರಕಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 55 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ ಎಂದರು.

ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವ ವೇಳೆ ವರ್ಷಕ್ಕೆ 50 ಸಾವಿರ ರುಪಾಯಿಯಂತೆ ಲೆಕ್ಕಹಾಕಿ 5 ಲಕ್ಷ ರೂಪಾಯಿ ಧನಸಹಾಯ ನೀಡಲಾಗುವುದು. ಅದಕ್ಕಾಗಿ 72 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ವೇತನ ಹೆಚ್ಚಳ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಶುಕ್ರವಾರ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂ. ಹೆಚ್ಚಳ ಮಾಡಲಾಗುತ್ತದೆ ಎಂದರು.

ಅತಿಥಿ ಉಪನ್ಯಾಸಕರ ಜೊತೆ ನಡೆಸಿದ ಸಭೆಯಲ್ಲಿ ಹಲವು ಬೇಡಿಕೆಗಳನ್ನು ಇಟ್ಟರು. ತಿಂಗಳಿಗೆ ಒಂದು ವೇತನ ಸಹಿತ ರಜೆ ನೀಡಲಾಗುತ್ತದೆ. ಅವರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಸೇವೆ ಕಾಯಂಗೊಳಿಸುವುದು ಅವರ ಬೇಡಿಕೆಯಾಗಿದೆ. ಅವರ ವರ್ಕ್‌ ಲೋಡ್‌ ಬಗ್ಗೆಯೂ ಮಾತುಕತೆಯನ್ನು ನಡೆಸಲಾಗಿದೆ.

ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸ ನೇಮಕಾತಿ ಸಂದರ್ಭದಲ್ಲಿ ಕೃಪಾಂಕ ನೀಡಲು ನಿರ್ಧರಿಸಲಾಗಿದೆ.

ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಮುಷ್ಕರವನ್ನು ಅತಿಥಿ ಉಪನ್ಯಾಸಕರು ವಾಪಸ್ ಪಡೆಯಬೇಕು ಎಂದು ಮನವಿ ಮಾಡುತ್ತೇನೆ.

ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 23 ರಿಂದ ತರಗತಿಗಳನ್ನು ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೇ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು.

ಮುಷ್ಕರ ಆರಂಭಗೊಂಡು ತಿಂಗಳುಗಳು ಕಳೆದರೂ ಸಹಾ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಹೆಚ್ಚಿದ್ದು, ಪ್ರತಿಭಟನೆಯ ಕಾರಣ ತರಗತಿಗಳು ನಡೆಯುತ್ತಿರಲಿಲ್ಲ.

ವಾರ್ಷಿಕ ಪರೀಕ್ಷೆಗಳು ಹತ್ತಿರವಾಗುತ್ತಿರುವಾಗ ಉಪನ್ಯಾಸಕರ ಮುಷ್ಕರದಿಂದ ಪಾಠಗಳು ಪೂರ್ಣಗೊಳ್ಳದೇ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಿದ್ದರು. ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 10 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಅವರ ಬೇಡಿಕೆಗಳನ್ನು ಬಹಳ ಕಾಲದಿಂದ ಸರ್ಕಾರ ಆಲಿಸಿಲ್ಲ ಎಂಬುದು ಆರೋಪವಾಗಿದೆ.

ಉದ್ಯೋಗ ಖಾಯಂ ಆಗುತ್ತದೆ ಎಂಬ ನಿರೀಕ್ಷೆಯಲ್ಲಿಯೇ 15-20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉಪನ್ಯಾಸಕರು ಸೇವಾ ಭದ್ರತೆ ನೀಡಿ ಎಂದು ಸರ್ಕಾರವನ್ನು ಹಲವು ಬಾರಿ ಒತ್ತಾಯಿಸಿದ್ದರು. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುತ್ತೇವೆ ಎಂದು ಕಾಂಗ್ರೆಸ್ ಭರವಸೆಯನ್ನು ನೀಡಿತ್ತು.

ಸರ್ಕಾರ ಈಗ ಉಪನ್ಯಾಸಕರ ನೇಮಕಾತಿ ಮಾಡುವಾಗ ಅತಿಥಿ ಉಪನ್ಯಾಸಕರು ಅರ್ಜಿ ಸಲ್ಲಿಕೆ ಮಾಡುವಂತಿಲ್ಲ. ಹಲವರ ವಯೋಮಿತಿ ಮೀರಿದೆ. ಪಿಎಚ್‌ಡಿ ಪೂರ್ಣಗೊಳಿಸಿದ ಹಲವು ಉಪನ್ಯಾಸಕರು ಸಹಾ ಈಗ ಸೇವಾ ಭದ್ರತೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು.