ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಿ.ಸಿ. ಪಾಟೀಲ ಅವರ ಪ್ರಥಮ ಪುತ್ರಿ ಸೌಮ್ಯ ಅವರನ್ನು ವಿವಾಹವಾಗಿದ್ದರು. ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಕಂಡವರು ಹೊನ್ನಾಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕತ್ತಲಗೆರೆ ಗ್ರಾಮದವರಾದ ಪ್ರತಾಪ್ ಕುಮಾರ್ (43)ಅವರು ಬಿ.ಸಿ.ಪಾಟೀಲ ಅವರ ಊರು ಹಿರೇಕೆರೂರಿನಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರು ವಾಸವಾಗಿದ್ದರು. ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.