ಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಶುಕ್ರವಾರ (ಏಪ್ರಿಲ್ 19) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಫಜಲಪುರ ಶಾಸಕ ಎಂ.ವೈ. ಪಾಟೀಲ್ಗೆ ದೂರವಾಣಿ ಕರೆ ಹೋಗಿದ್ದು, ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರ ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, ಪಕ್ಷ ಸೇರ್ಪಡೆಗೆ ಯಾವುದೇ ವಿರೋಧ ಇಲ್ಲ ಎನ್ನಲಾಗಿದೆ.
ಸಹೋದರ ನಿತಿನ್ ಗುತ್ತೇದಾರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ನಡುವಿನ ಸಂಬಂಧ ಮೊದಲಿನಿಂದಲೂ ಸರಿಯಿಲ್ಲ. 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆಗ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಇದರಿಂದ ಮಾಲೀಕಯ್ಯ ಗುತ್ತೇದಾರ್ ಸೋತಿದ್ದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಬಿಜೆಪಿಯಲ್ಲಿರುವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.