ಬೆಂಗಳೂರು : ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಡಾಲರ್ಸ್ ಕಾಲೋನಿಯ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರ್ಪಡೆ ಆದರು. ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಬಿಜೆಪಿ ಧ್ವಜ ನೀಡಿದ ಬಿ.ಎಸ್‌. ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು ನಮ್ಮ ಪಕ್ಷವನ್ನು ಸೇರಿರುವುದು ದೊಡ್ಡ ಶಕ್ತಿ ಕೊಟ್ಟಂತಾಗಿದೆ. ಶೋಭಾ ಕರಂದ್ಲಾಜೆಯವರು 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಜೆ ಹಳ್ಳಿ- ಕೆಜಿ ಹಳ್ಳಿ ಹಿಂದು ಮುಸ್ಲಿಂ ಗಲಾಟೆ ಆದಾಗ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯನ್ನು ಸುಡಲಾಗಿತ್ತು. ಆಗ ಕಾಂಗ್ರೆಸ್‍ನವರು ಬೆಂಬಲ ಕೊಡಲಿಲ್ಲ. ನಾವು ಆಗ ಶ್ರೀನಿವಾಸಮೂರ್ತಿ ಅವರ ಜತೆ ಗಟ್ಟಿಯಾಗಿ ನಿಂತಿದ್ದೆವು. ಬೆಂಬಲಿಗರ ಜತೆ ಅಖಂಡ ಶ್ರೀನಿವಾಸಮೂರ್ತಿಯವರ ಪಕ್ಷ ಸೇರುವಿಕೆಯಿಂದ ಆನೆ ಬಲ ಬಂದಂತಾಗಿದೆ. ಅವರಿಗೆ ನಿಮ್ಮೆಲ್ಲರ ಪರವಾಗಿ ಸ್ವಾಗತ ಕೋರುತ್ತೇನೆ. ಅವರನ್ನು ಪಕ್ಷದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಬಿ.ಎಸ್.‌ ಯಡಿಯೂರಪ್ಪ ಹೇಳಿದರು.