
ಬೆಂಗಳೂರು: ರಾಜ್ಯದ ವಿವಿಧೆಡೆ ಮಾ. 22 ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 22 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಕೆಲ ಸ್ಥಳಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
23, 24 ಮತ್ತು 25 ರಂದು ಕೂಡ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ಗರಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದ್ದು, ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (40.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಬಾಗಲಕೋಟೆ (40.5 ಡಿಗ್ರಿ ಸೆಲ್ಸಿಯಸ್), ರಾಯಚೂರು (40.5 ಡಿಗ್ರಿ ಸೆಲ್ಸಿಯಸ್) ಹಾಗೂ ಬೀದರ್‌ನಲ್ಲಿಯೂ (40.2 ಡಿಗ್ರಿ ಸೆಲ್ಸಿಯಸ್) ಅಧಿಕ ಉಷ್ಣಾಂಶ ವರದಿಯಾಗಿದೆ.