ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯುವ ಜನಾಂದೋಲನ ಇದಾಗಿದ್ದು, ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಹೇಳಿದರು.

ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣವನ್ನು ಮುಂದಿಟ್ಟು ಬಿಜೆಪಿ ಮತ್ತು ಜೆಡಿಎಸ್ ಸದನದಲ್ಲಿ ಒಟ್ಟಾಗಿ ಹೋರಾಟ ಮಾಡಿದ್ದೆವು. ಸದನ ಮುಗಿದ ಬಳಿಕ ಈ ಹೋರಾಟ ಮುಂದುವರೆಸಲು ನಿರ್ಧರಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನದಾಸ ಅಗರ್ವಾಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ನಾವೆಲ್ಲರೂ ಕುಳಿತು ಚರ್ಚಿಸಿ ಎಲ್ಲವನ್ನೂ ಇತ್ಯರ್ಥ ಪಡಿಸಲಾಗಿದೆ. ಶನಿವಾರ ಬೆಳಿಗ್ಗೆ 8:30ಕ್ಕೆ ನೈಸ್ ರಸ್ತೆ ಜಂಕ್ಷನ್‌ನಿಂದ ಪಾದಯಾತ್ರೆ ಹೊರಡಲಿದೆ ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದ ಬಗ್ಗೆ ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ಚರ್ಚೆ ಆಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಡಿ ಪರಿಶಿಷ್ಟ ಪಂಗಡಗಳ ಹಣವನ್ನು ಕಾಂಗ್ರೆಸ್ ಸರಕಾರ ದೋಚಿತ್ತು. ಸ್ವತಃ ಮುಖ್ಯಮಂತ್ರಿಗಳೇ ಸದನದಲ್ಲಿ ಇದನ್ನು ಒಪ್ಪಿಕೊಂಡಿದ್ದಾರೆ. ಮತ್ತೊಂದೆಡೆ ಮುಡಾದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ನೀಡಿದ್ದರ ಜೊತೆಗೆ ಸಾವಿರಾರು ನಿವೇಶನಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಮಗೆ ಬೇಕಾದವರಿಗೆ ಕೊಟ್ಟದೆ. ಇದರಿಂದ ಮುಡಾಗೆ 4 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ. ಬಡವರಿಗೆ ಸಿಗಬೇಕಾದ ನಿವೇಶನಗಳನ್ನು ಇವರ ಹಿಂಬಾಲಕರಿಗೆ, ರಿಯಲ್ ಎಸ್ಟೇಟ್ ದಂಧೆಗೆ ಕೊಡಲಾಗಿದೆ ಎಂದು ಆರೋಪಿಸಿದರು.