ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದಹಳೆ ಪಿಂಚಣಿ ಯೋಜನೆ ( Old Pension Scheme-OPS ) ಜಾರಿಗೊಳಿಸಲು ಸರ್ಕಾರವು ಪರಿಶೀಲನಾ ಸಮಿತಿಯನ್ನು ರಚನೆ ಮಾಡಿದೆ.

ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ( National Pension Scheme – NPS ) ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತಂತೆ ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶಕುಮಾರ ಸಿಂಗ್‌, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ಡಾ.ವಿಶಾಲ.ಆರ್ ಹಾಗೂ ಆರ್ಥಿಕ ಇಲಾಖೆಯ ಕಾರ್ಯದರ್ಶಿ (ವೆಚ್ಚ) ಡಾ.ಎಂ.ಟಿ ರೇಜು ಅವರನ್ನು ನೇಮಿಸಲಾಗಿದೆ.
ಈ ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ನಿರ್ಧಾರಗಳನ್ನು ಸೂಕ್ತ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಿತಿಗೆ ನಿರ್ದೇಶನ ನೀಡಲಾಗಿದೆ.