ಬೆಂಗಳೂರು : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬುಧವಾರ (ಸೆಪ್ಟಂಬರ್ 25) ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗಲಿದ್ದು, ಮೂರೂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆಗಳಿದ್ದು, ವೇಗವಾದ ಗಾಳಿಯ ಜತೆ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳಬಹುದು ಎಂದು ಹೇಳಲಾಗಿದೆ. ಮಂಗಳವಾರ ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಜೋರಾಗಿ ಮಳೆಯಾಗಿದೆ. ರಾತ್ರಿಯ ವೇಳೆ ಮಳೆ ಜೋರಾಗಿತ್ತು.