ಬೆಂಗಳೂರು : ಕರ್ನಾಟಕದಲ್ಲಿ ವಿಶೇಷವಾಗಿ ಕರಾವಳಿ ಹಾಗೂ ಹಾಗೂ ಮಲೆನಾಡಿನ ಭಾಗದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿರುವ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಮಳೆಯಲ್ಲಿ ಪ್ರಮಾಣ ಸೋಮವಾರದಿಂದ ಸ್ವಲ್ಪ ಮಟ್ಟಿಗೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಜೋರಾಗಿ ಸುರಿಯಲಿದೆ. ಆದರೆ ಸೋಮವಾರ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಬದಲು ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುನ್ಸೂಚನೆಯ ಪ್ರಕಾರ, ಮಳೆಯಲ್ಲಿ ಸ್ವಲ್ಪ ಇಳಿಕೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ವ್ಯಾಪಕ ಮಳೆ ಆಗಲಿದೆ. ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು, ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ.
ಜುಲೈ 23ರಿಂದ ವಾಯುಭಾರ ಕುಸಿತದ ತೀವ್ರತೆಯಲ್ಲಿ ಇಳಿಕೆ ಆಗುವ ನಿರೀಕ್ಷೆ ಇದೆ. ಹೀಗಾಗಿ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಬಹುದು. ಮಳೆನಾಡಿಗೆ ಆ ಹೊತ್ತಿಗೆ ಮಳೆ ಆರ್ಭಟ ಇಳಿಕೆ ಆಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದಲ್ಲಿನ ವೈಪರಿತ್ಯದಿಂದಾಗಿ ಮುಂದಿನ ನಾಲ್ಕೈದು ದಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಬಾಗಲಕೋಟೆ, ವಿಜಯಪುರ ಭಾಗಗಳಲ್ಲಿ ಮಳೆ ಬೀಳಲಿದೆ.