ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22, 23ರಂದು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.

ಜೂನ್ 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.ರಾಜ್ಯದ 10 ಜಿಲ್ಲೆಗಳಲ್ಲಿ ಶನಿವಾರ (ಜೂನ್‌ 22) ಭಾರಿ ಮಳೆಯಾಗಲಿದೆ. ರಾಜ್ಯದ 13 ಜಿಲ್ಲೆಗಳಿಗೆ ಭಾನುವಾರ (ಜೂನ್‌ 23) ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಉದ್ದಕ್ಕೂ ಹಾಗೂ ಇತರೆಡೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.