ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಏಕಸದಸ್ಯ ಪೀಠ ರದ್ದುಪಡಿಸಿ ಮಾರ್ಚ್‌ 6ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ ಮತ್ತು ರಾಜೇಶ ರೈ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಂ ಹುಯಿಲಗೋಳ ಅವರು “ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. 10 ಮತ್ತು 12ನೇ ತರಗತಿ ಮಕ್ಕಳಿಗೆ ನಡೆಸುವ ಪರೀಕ್ಷೆಯ ರೀತಿ ಎಂದು ಇದನ್ನು ತಿಳಿಯಬಾರದು. ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುತ್ತಾರೆ. ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್‌ 145ರ ಅಡಿ ಯಾವುದೇ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಬೇಕಿಲ್ಲ” ಎಂದು ವಾದಿಸಿದರು.

ಪ್ರತಿವಾದಿಗಳನ್ನು ಪ್ರತಿನಿಧಿಸಿದ್ದ ವಕೀಲರಾದ ಎ. ವೇಲನ್,‌ ಕೆ ವಿ ಧನಂಜಯ ಅವರು “ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಆರ್‌ಟಿಇ ಕಾಯಿದೆ ಸೆಕ್ಷನ್‌ 30ರ ಅಡಿ ಸಣ್ಣ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿಸುವುದಿಲ್ಲ. ಯಾವುದೇ ನಿಯಮ ಪಾಲಿಸದೇ ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್‌ 22ರ ಅಡಿ ಸರ್ಕಾರವು ಈ ಪರೀಕ್ಷೆ ನಡೆಸಲು ಅಧಿಸೂಚನೆ ಪ್ರಕಟಿಸಿದೆ. ಇದರಿಂದ ವಿದ್ಯಾರ್ಥಿಗಳ ಪೋಷಕರ ಹಕ್ಕು ಮೊಟಕಾಗಿದೆ” ಎಂದು ವಾದಿಸಿದರು.

ಪ್ರಕರಣದ ಹಿನ್ನೆಲೆ:
ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘಗಳು, ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್​ಗಳ ಉಲ್ಲಂಘನೆಯಾಗಿದೆ. ಹೀಗಾಗಿ ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.
ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಮೇಲ್ಮನವಿ ಸಲ್ಲಿಸಿತ್ತು. ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್, ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಆದೇಶಿಸಿತ್ತು.