ಕಾಸರಗೋಡು : ಕಾಸರಗೋಡು ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಆರ್ಭಟ ಮುಂದುವರಿದಿರುವುದರಿಂದ ಜಿಲ್ಲೆಯ ಹಲವೆಡೆ ಮತ್ತು ಕಾಲೇಜುಗಳ ಪರಿಸರ (ವೃತ್ತಿಪರ ಕಾಲೇಜುಗಳು ಸೇರಿದಂತೆ) ಜಲಾವೃತವಾಗಿವೆ.
ಆದ್ದರಿಂದ ರಾಜ್ಯ, ಸಿಬಿಎಸ್ ಇ, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳು ಇತ್ಯಾದಿಗಳಿಗೆ ಜುಲೈ 31ರ ಬುಧವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಇದೇ ವೇಳೆ ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ಶಾಲಾ-ಕಾಲೇಜಿಗೆ ರಜೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು. 31ರಂದು(ಬುಧವಾರ) ಮಲೆನಾಡಿನ ಆರು ತಾಲ್ಲೂಕಿನ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಶಾಲೆಗಳು, ಪಿಯು, ಪದವಿ ಮತ್ತು ಎಲ್ಲಾ ರೀತಿಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.