ಸವದತ್ತಿ: ಜಿಲ್ಲೆಯಲ್ಲಿ ಅನೇಕ ನೀರಾವರಿ ಯೋಜನೆಗಳ ಜಾರಿಗಾಗಿ ಹೋರಾಟ ನಡೆಯುತ್ತಿದ್ದು, ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಶೀಘ್ರದಲ್ಲೇ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಿಂದೋಗಿ ಗ್ರಾಮದಲ್ಲಿ ಗ್ರಾಪಂನಲ್ಲಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಮತಕ್ಷೇತ್ರ ಅಥವಾ ಜಿಲ್ಲೆ ಪ್ರಗತಿ ಹೊಂದಬೇಕಾದರೆ ನೀರಾವರಿ ಅವಶ್ಯಕವಾಗಿ ಬೇಕು. ಅದರೊಂದಿಗೆ ನಾವು ಶಿಕ್ಷಣಕ್ಕಾಗಿಯೂ ಆದ್ಯತೆ ನೀಡಬೇಕು. ಮಕ್ಕಳ ಭವಿಷ್ಯ ಗುಣಮಟ್ಟದ ಶಿಕ್ಷಣದ ಮೇಲೆಯೇ ಅವಲಂಬಿತವಾಗಿರುತ್ತದೆ ಎಂದು ತಿಳಿಸಿದರು.

ಯಮಕನಮರಡಿ ಮತಕ್ಷೇತ್ರದಲ್ಲಿ ಅಪಾರ ಆಸಕ್ತಿ ವಹಿಸಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಶಾಸಕ ವಿಶ್ವಾಸ ವೈದ್ಯ ಅವರು ಅದೇ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶ್ರಮಿಸಬೇಕು. ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ ಅನೇಕ ಅಂಗನವಾಡಿ ಕೇಂದ್ರಗಳಿಗೆ ಕಟ್ಟದ ವ್ಯವಸ್ಥೆ ಸರಿಯಾಗಿಲ್ಲ. ಹೀಗಾಗಿ ನಮ್ಮದೇ ಜಿಲ್ಲೆಯ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಮುಂದಾದರೆ ಒಳ್ಳೆಯದು ಎಂದ ಅವರು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಮುಂದಿನ ಎರಡು ಮೂರು ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಮುನವಳ್ಳಿಯ ಸೋಮಶೇಖರ್ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.ಈ ಸಂದರ್ಭದಲ್ಲಿ ಶಾಸಕರಾದ ವಿಶ್ವಾಸ ವೈದ್ಯ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು.