ಉಡುಪಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇದೀಗ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂಬ ಸುದ್ದಿ ಹರಡಿದೆ.
ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಳಿಸಲಾಗುತ್ತಿದೆ, ಉಡುಪಿ-ಚಿಕ್ಕಮಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಅವರನ್ನು ಬೆಂಗಳೂರಿಗೆ ಕಳುಹಿಸಲು ನಿರ್ಧರಿಸಿದ್ದು ಈ ಹಿಂದೆಯೂ ಅವರು ಯಶವಂತಪುರ ವಿಧಾನಸಭಾ ಮತಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಹಿನ್ನಲೆಯಲ್ಲಿ ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ಬೆಂಗಳೂರಿಗೆ ಶೋಭಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಇದೀಗ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹಾಗೂ ಸರಳ ಸಜ್ಜನ ವ್ಯಕ್ತಿ ಎಂದೇ ಕರೆದುಕೊಂಡಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಲೋಕಸಭೆಗೆ ಕಳುಹಿಸಲು ಬಿಜೆಪಿ ತಯಾರಿ ನಡೆಸುತ್ತಿದೆ ಎಂಬ ಮಾಹಿತಿ ಬಂದಿದೆ. ಪರಿಷತ್ತಿಗೆ ಅವರು ನಿರಂತರವಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಮಂಗಳೂರಿನಲ್ಲಿ ಬಂಟ ಸಮುದಾಯದ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಯಿದ್ದು ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿರುವ ಬಿಲ್ಲವ ಸಮುದಾಯಕ್ಕೆ ಮಾನ್ಯತೆ ನೀಡುವ ನಿಟ್ಟಿನಲ್ಲಿ ಅದೇ ಸಮುದಾಯದವರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದರೂ ಅಚ್ಚರಿಪಡಬೇಕಾಗಿಲ್ಲ. ಇನ್ನೊಂದೆಡೆ ಮಾಜಿ ಸಚಿವ ಪ್ರಮೋದ ಮಧ್ವರಾಜ್ ಸಹಾ ಬಿಜೆಪಿ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಉಡುಪಿ ಲೋಕಸಭಾ ಮತಕ್ಷೇತ್ರದಿಂದ ಈ ಬಾರಿ ಮೊಗವೀರ ಸಮುದಾಯದ ಪ್ರಮೋದಗೆ ಟಿಕೆಟ್ ನೀಡಬೇಕು ಎಂಬ ಆಗ್ರಹ ಬಲವಾಗಿ ಕೇಳಿ ಬಂದಿದೆ. ಈ ನಡುವೆ ಅವರು ತಮಗೆ ಟಿಕೆಟ್ ಸಿಕ್ಕೇ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಕರಾವಳಿಯ ಈ ಪ್ರತಿಷ್ಠಿತ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡುವ ಸಾಧ್ಯತೆ ಗೋಚರಿಸಿದೆ.