ಶಿವಮೊಗ್ಗ : ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಂದ್‌ ಮಾಡಲಾಗಿದ್ದ ಜೋಗ ಜಲಪಾತ ವೀಕ್ಷಣೆಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರ ಹೊರತುಪಡಿಸಿ ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್‌, ಮುಂಬಯಿ ಬಂಗಲೆ ಮೊದಲಾದೆಡೆಯಿಂದ ಜಲಪಾತ ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿರುವ ಕಾರಣ ಜನವರಿ 1ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರ ವೀಕ್ಷಣೆ ನಿಷೇಧಿಸಿ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಈಗ ಹೊಸ ವರ್ಷಾಚರಣೆ ಪ್ರಯುಕ್ತ ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ. ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.