ಹುಬ್ಬಳ್ಳಿ:
ಅಯೋಧ್ಯೆಯಲ್ಲಿಜ.22ರಂದು ನಡೆಯಲಿರುವ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನಾ ಸಮಾರಂಭದಲ್ಲಿ ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರಿಗೆ ವಿಶೇಷ ಆಹ್ವಾನ ನೀಡಲಾಗುತ್ತಿದೆ. ಅಂದು ಸನ್ಮಾನ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಾಬ್ರಿ ಮಸೀದಿ ಧ್ವಂಸ ಘಟನೆಯ ಹಿಂದಿನ ದಿನ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆದಿತ್ತು. ಗಲಾಟೆ ವೇಳೆ ಅಡಕೆ ಅಂಗಡಿಯೊಂದಕ್ಕೆ ಬೆಂಕಿ ಬಿದ್ದಿತ್ತು. ಈ ಪ್ರಕರಣದಲ್ಲಿ ಶ್ರೀಕಾಂತ ಪೂಜಾರಿ ಮೂರನೇ ಆರೋಪಿಯಾಗಿದ್ದರು. ಈ ಮಧ್ಯೆ, ಹಿಂದಿನ ಬಾಕಿ ಪ್ರಕರಣಗಳ ವಿಲೇವಾರಿಗೆ ರಾಜ್ಯ ಸರ್ಕಾರದಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಡಿ.29ರಂದು ಶ್ರೀಕಾಂತ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದನ್ನು ವಿರೋಧಿಸಿ ಬಿಜೆಪಿ ವ್ಯಾಪಕ ಹೋರಾಟ ನಡೆಸಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಈ ನಡುವೆ ಶ್ರೀಕಾಂತ ಬಿಡುಗಡೆಗೊಂಡ ಬೆನ್ನಿಗೆ ಅಯೋಧ್ಯೆಯ ರಾಮಮಂದಿರ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದರು.