ಬೆಂಗಳೂರು :
ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಯಪ್ರಕಾಶ ಹೆಗ್ಡೆ ಅವರ ಅಧಿಕಾರಾವಧಿಯನ್ನು 2024 ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿ 2023ರ ನವೆಂಬರ್ 26 ರಂದು ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಆಯೋಗ 2015 ರ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ತಯಾರಿಸುವ ಪ್ರಕ್ರಿಯೆಯಲ್ಲಿದೆ. ಈ ವರದಿಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸಲು ಕಾಲಾವಕಾಶ ಬೇಕಿದ್ದು, ಪ್ರಸ್ತುತ ಆಯೋಗವನ್ನು ಮುಂದುವರಿಸಬೇಕು ಎಂದು ಕೋರಲಾಗಿತ್ತು ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ಮೌಖಿಕವಾಗಿ ಮುಂದುವರಿಯುಂತೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಸೂಚಿಸಿದ್ದಾರೆ. ಆದರೆ, ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಣಯ ಕೈಗೊಂಡಿದೆ. ಈ ಮೂಲಕ ಡಿಸೆಂಬರ್ ಒಳಗೆ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆ.