ಬೆಳಗಾವಿ : ಅಥಣಿ ತಾಲೂಕಿನ ರೈತರ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ತೆಲಸಂಗ, ಖಿಲಾರದಡ್ಡಿ, ಬೊಸಲೆವಾಡಿ, ಕನ್ನಾಳ, ಪಡತರವಾಡಿ, ಬನ್ನೂರು, ಕಕಮರಿ, ಕೊಟ್ಟಲಗಿ ಹಾಗೂ ಕರಿಮಸೂತಿ ಗ್ರಾಮಗಳನ್ನು ಒಳಗೊಂಡಂತೆ ಸುಮಾರು 19274.00 ಹೆಕ್ಟೇರ್ ಪ್ರದೇಶಕ್ಕೆ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಲಸಂಪನ್ಮೂಲ ಇಲಾಖೆ ವತಿಯಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿಯಲ್ಲಿ ಬುಧವಾರ (ಮಾ.06) ನಡೆದ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿತ್ತು. ಕೃಷ್ಣಾ ನದಿಯ ಎಡದಂಡೆಯಿಂದ 2.903 ಟಿ.ಎಂ.ಸಿ ನೀರು ಎತ್ತುವ ಮೂಲಕ ರೈತರ ಅನುಕೂಲಕ್ಕಾಗಿ ಯೋಜನೆ ಪ್ರಾರಂಭಿಸಲಾಗಿದೆ. ಇಲ್ಲಿನ ಶಾಸಕರ ಬೇಡಿಕೆಯಂತೆ ಅಂದಾಜು 1486 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಚಾಲನೆಗೊಳ್ಳಲಿದೆ. ನೀರು ಲಭ್ಯತೆಯಿದ್ದ ಪ್ರದೇಶದ ಪ್ರತಿ ಹನಿ ನೀರು ರೈತರಿಗೆ ಉಪಯೋಗವಾಗಬೇಕು. ರೈತರ ಜಮೀನುಗಳಿಗೆ ಹರಿ ಬಿಡುವ ಮೂಲಕ ನೀರು ಸಮರ್ಪಕ ಬಳಕೆಯಾಗಬೇಕು ಎಂದು ಹೇಳಿದರು.
ಈ ಯೋಜನೆಯಿಂದ ಅಥಣಿ ತಾಲೂಕಿನ 95% ಪ್ರತಿಶತ ನಿರಾವರಿ ಸಮಸ್ಯೆ ಕಡಿಮೆಯಾಗಲಿದೆ. ಕೆರೆಗಳಲ್ಲಿ ನೀರು ತುಂಬಿಸುವ ಮೂಲಕ ಅಂತರ್ಜಲ ಮೇಲೆತ್ತುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಕೆರೆ ತುಂಬಿಸುವ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಇದರಿಂದ ಅಂತರ್ಜಾಲ ಕುಸಿತ ತಪ್ಪಿಸಬಹುದು ಎಂದು ತಿಳಿಸಿದರು.
ಮಹಾದಾಯಿ ಯೋಜನೆಗೆ ಜಾರಿಗೆ ಸರ್ಕಾರ ಸಿದ್ದ:
ಸರ್ಕಾರ ಈ ಹಿಂದೆಯೂ ಅಧಿಕಾರದ ಅವಧಿಯಲ್ಲಿ ತಿಳಿಸಿದಂತೆ ನೀರಾವರಿ ಯೋಜನೆಗಳಿಗೆ ಪ್ರತಿ ವರ್ಷ 10 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ನೀರಾವರಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಿದ್ದೇವೆ. ಮಹಾದಾಯಿ ಯೋಜನೆ ಜಾರಿಗೆ ನ್ಯಾಯಾಲಯದಿಂದ ತಡೆಯಾಜ್ಞೆಯಿದೆ. ನ್ಯಾಯಾಲಯದಿಂದ ಕ್ಲಿಯರೆನ್ಸ್ ಸಿಕ್ಕರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅಭಿವೃದ್ಧಿಗೆ ಕೂಡಲೇ ಮಹಾದಾಯಿ ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಪ್ರಣಾಳಿಕೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಚುನಾವಣೆಗಿಂತ ಮುಂಚಿತವಾಗಿ ಹೇಳಿದ ಐದು ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ತರಲಾಗಿದೆ.
ಸರ್ಕಾರ ರಾಜ್ಯದ ಎಲ್ಲ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆ ಮೂಲಕ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ.
ಮುಂದಿನ ವರ್ಷ ನೀರಾವರಿ, ರಸ್ತೆ ನಿರ್ಮಾಣ, ಮೂಲಭೂತ ಸೌಕರ್ಯ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲಾ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ 54 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡಲಾಗುವುದು ಎಂದು ತಿಳಿಸಿದರು.
ಆಂಜನೇಯ ಜನ್ಮಸ್ಥಳ ಅಭಿವೃದ್ಧಿಗೆ ಕ್ರಿಯಾ ಯೋಜನೆ:
ಗಂಗಾವತಿ ತಾಲೂಕಿನ ಆಂಜನೇಯ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ಒದಗಿಸಲಾಗುವುದು. ಸಾಮಾಜಿಕ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅದೇ ರೀತಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣವರ ಫೋಟೋ ಇಡುವುದು ಕಡ್ಡಾಯ ಎಂದು ಸರಕಾರ ಆದೇಶ ಹೊರಡಿಸಲಾಗಿದೆ.
ಬಡವರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಪ್ರತಿ ತಿಂಗಳು 1 ಕೋಟಿ 20 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 2 ಸಾವಿರ ನೀಡುವುದರ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿರುವುದು ರಾಜ್ಯದ ಜನರಿಗೆ ಅನುಕೂಲದಾಯಕವಾಗಿದೆ. ಪೆಟ್ರೋಲ್, ಡೀಸೆಲ್, ದವಸ ಧಾನ್ಯಗಳ ಬೆಲೆ ಏರಿಕೆಗೆ ರಾಜ್ಯದ ಜನತೆ ಬೇಸತ್ತು ಹೋಗಿತ್ತು. ಸರ್ಕಾರದ ಗ್ಯಾರೆಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ಬಹಳ ಅನುಕೂಲವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನ್ನಭಾಗ್ಯ, ಗ್ರಹಲಕ್ಷ್ಮೀ, ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳನ್ನು ರಾಜ್ಯದ ಜನತೆಯ ಮನೆ ಬಾಗಿಲಿಗೆ ತಲುಪಿಸಲಾಗಿದೆ. ಈ ಭಾಗದ ಅಭಿವೃದ್ಧಿಗೆ ಶಾಸಕರು ನಿರಂತರ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದ ಕುಟುಂಬಗಳ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ಹಣ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿಯಲ್ಲಿ
ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಕೂಡ ಪ್ರಾರಂಭಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ನೀರಿನ ಸಮಸ್ಯೆ ಬಗೆ ಹರಿಯಲಿದೆ. ಮುಂಬರುವ 2 ವರ್ಷಗಳಲ್ಲಿ ಏತ ನೀರಾವರಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು.
ಗ್ಯಾರೆಂಟಿಗಳ ಯೋಜನೆಗಳ ಸಮರ್ಪಕ ಅನುಷ್ಠಾನ;
ಚುನಾವಣೆಯ ಪೂರ್ವದಲ್ಲಿ ರಾಜ್ಯಕ್ಕೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಬಸವಣ್ಣನವರ ವಚನದಂತೆ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಈ ಭಾಗದ ರೈತರು ಸ್ವಾವಲಂಬಿ ಜೀವನ ಸಾಗಿಸಲು ನೀರಿನ ಅವಶ್ಯಕತೆ ಬಹಳಷ್ಟಿದೆ. ಅಥಣಿ ತಾಲೂಕಿನ ಪೂರ್ವಭಾಗದ ಆಸೆಯಂತೆ ಜನರ ಆಶೋತ್ತರಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಕೆಳ ವರ್ಗದ ಬಡ ಜನರು ನೆಮ್ಮದಿಯಿಂದ ಇದ್ದಾರೆ. ಅದರಂತೆ ರಾಜ್ಯದ ಗಡಿ ಭಾಗದ ಸಾಕಷ್ಟು ಹಳ್ಳಿಗಳಲ್ಲಿ ಜನರಿಗೆ, ಜಾನುವಾರುಗಳಿಗೆ, ಪಕ್ಷಿ ಪ್ರಾಣಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಅಥಣಿ ತಾಲೂಕಿನ ರೈತರ ಮಕ್ಕಳ ಅನುಕೂಲಕ್ಕಾಗಿ ಕೃಷಿ ಕಾಲೇಜು ನಿರ್ಮಾಣಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಮನವಿ ಮಾಡಿಕೊಂಡರು.
ಏತ ನೀರಾವರಿ ಯೋಜನೆ; ಬರಗಾಲ ನಿರ್ವಹಣೆ ಸಹಾಯವಾಗಲಿದೆ
ಸುಮಾರು ವರ್ಷಗಳಿಂದ ಈ ಭಾಗದ ರೈತರಿಗೆ ನೀರಾವರಿ ಯೋಜನೆಯ ಅವಶ್ಯಕತೆಯಿತ್ತು. ರೈತರ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧವಿದೆ. ಪ್ರತಿ ವರ್ಷ ಬರಗಾಲದಲ್ಲಿ ರೈತರಿಗೆ ಬಹಳ ತೊಂದರೆ ಆಗುತಿತ್ತು. ಈ ನೀರಾವರಿ ಯೋಜನೆ ಪ್ರಾರಂಭದಿಂದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಸಮಗ್ರ ನೀರಾವರಿ ಅಭಿವೃದ್ಧಿಗೆ ಸರ್ಕಾರ ಬದ್ದವಿದೆ ಎಂದು ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಮ್. ಬಿ ಪಾಟೀಲ ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡಪರ ಯೋಜನೆಗಳಾಗಿವೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮನಿಯರಿಗೆ ತಿಂಗಳಿಗೆ 2 ಸಾವಿರ ನೀಡುವುದರ ಮೂಲಕ ಪ್ರತಿ ವರ್ಷ 24 ಸಾವಿರ ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ.
ಸುಮಾರು 1486 ಕೋಟಿ ವೆಚ್ಚದಲ್ಲಿ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಪ್ರಾಂಭಿಸುವ ಮೂಲಕ ಈ ಭಾಗದ ರೈತರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ತಿಂಗಳಿಗೆ 5 ಸಾವಿರ ಕೋಟಿ ರೂಪಾಯಿಯನ್ನು ಸರ್ಕಾರ ವ್ಯಯ ಮಾಡುತ್ತಿದೆ. ಅದರ ಜೊತೆಗೆ ಸರ್ಕಾರ ಸಾಕಷ್ಟು ಅಭಿವೃದ್ಧಿಪರ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳುತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು.
ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಪ್ರಾರಂಭವಾಗಲು ಶಾಸಕ ಲಕ್ಷ್ಮಣ ಸವದಿ ಅವರ ಪ್ರಾಮಾಣಿಕ ಪ್ರಯತ್ನ ಬಹಳಷ್ಟಿದೆ. ಈ ಭಾಗದ ರೈತರಿಗೆ
ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಸಂಜೀವಿನಿ ಆಗಲಿದೆ. ಕೇವಲ ರೈತರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗಲಿದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸಾಕಷ್ಟು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಮುಂದಿನ ದಿನಗಳಲ್ಲಿ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ:
ಇದಕ್ಕೂ ಮುಂಚೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಲೋಕೋಪಯೋಗಿ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಗುದ್ದಲಿ ಪೂಜೆ ಸಲ್ಲಿಸುವುದರ ಮೂಲಕ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ವಿಧಾನ ಪರಿಷತ್ ಶಾಸಕ ಚನ್ನರಾಜ ಹಟ್ಟಿಹೊಳಿ, ವಿಧಾನ ಸಭೆ ಶಾಸಕ ಮಹೇಂದ್ರ ತಮ್ಮಣ್ಣವರ, ಮಹಾರಾಷ್ಟ್ರ ಜತ್ತ ಶಾಸಕರಾದ ವಿಕ್ರಾಂತ ಸಾಮಂತ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಬೆಳಗಾವಿ ಉತ್ತರ ವಲಯ ಪೋಲಿಸ ಮಹಾನೀರಿಕ್ಷಕ ವಿಕಾಶ ಕುಮಾರ ವಿಕಾಶ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಎಸ್ ಗುಳೇದ, ಕೊಟ್ಟಲಗಿ ಗ್ರಾಮ ಪಂಚಾಯತ ಅಧ್ಯಕ್ಷೆ ನೀಲವ್ವ ತೇಲಿ, ಅಥಣಿ ತಾಲೂಕಿನ ಸುತ್ತ ಮುತ್ತಲಿನ ಗ್ರಾಮದ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.