ಬೆಂಗಳೂರು:

25 ವರ್ಷಗಳ ಹಿಂದೆ ಅಂದಿನ ಈ ದಿನ (ಫೆ.7, 1999) ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ, ಟೆಸ್ಟ್ ಪಂದ್ಯದ ಒಂದೇ ಇನಿಂಗ್ಸ್‌ನಲ್ಲಿ ಎಲ್ಲ 10 ವಿಕೆಟ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದರು. ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅನಿಲ್ ಕುಂಬ್ಳೆ ಅವಿಸ್ಮರಣೀಯ ಸಾಧನೆ ಮಾಡಿದ್ದರು.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್‌ನ ಮಾಜಿ ಬೌಲರ್ ಜಿಮ್ ಲೇಕರ್ ಬಳಿಕ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿದ್ದರು. ಈ ಐತಿಹಾಸಿಕ ಕ್ಷಣವನ್ನು ನೆನಪಿಸಿಕೊಂಡಿರುವ ಬಿಸಿಸಿಐ, ಅಭಿಮಾನಿಗಳಿಗಾಗಿ ವಿಡಿಯೊ ಹಂಚಿಕೊಂಡಿದೆ.

ಬಳಿಕ ಈ ದಾಖಲೆಯನ್ನು ನ್ಯೂಜಿಲೆಂಡ್‌ನ ಸ್ಪಿನ್ನರ್ ಎಜಾಜ್ ಪಟೇಲ್ (2021, ಭಾರತ ವಿರುದ್ಧ) ಸರಿಗಟ್ಟಿದ್ದರು. ಟೆಸ್ಟ್ ಕ್ರಿಕೆಟ್‌ನ ಇನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಎಜಾಜ್ ಮೂರನೇ ಆಟಗಾರರೆನಿಸಿದ್ದಾರೆ.