ಕುಂದಾಪುರ : ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕಕ್ಕೆ ಹೋಲಿಸಿದರೆ ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್ ಮತ್ತು ಕೆಎಎಸ್ ನಲ್ಲಿ ಹಿಂದುಳಿದಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ఎంಜಿನಿಯರಿಂಗ್, ಮೆಡಿಕಲ್, ಕಂಪ್ಯೂಟರ್ ಸೈನ್ಸ್, ಸಿಎ ಕೋರ್ಸ್ಗಳಿಗೆ ಹೆಚ್ಚಿನ ಆಸ್ಥೆ ತೋರಿಸುತ್ತಿದ್ದಾರೆ. ಭವಿಷ್ಯದಲ್ಲಿ ಐಎಎಸ್ ಮತ್ತು ಕೆಎಎಸ್ ಓದಲು ಕರಾವಳಿ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ ಕೊಡ್ಗಿ ಹೇಳಿದರು.
ಶನಿವಾರ ಇಲ್ಲಿನ ನಾರಾಯಣಗುರು ಸಭಾಭವನದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ನಾರಾಯಣ ಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘ ಎಲ್ಲ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕಳೆದ ಸಾಲಿನಲ್ಲಿ ಉಚಿತ ಸಿಇಟಿ ತರಬೇತಿ ನೀಡಿದ್ದೆವು. ಎಲ್ಲ ಸಮುದಾಯದ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎನ್ನುವುದು ನಮ್ಮ ಆಶಯವಾಗಿದೆ. ಕರಾವಳಿ ಜಿಲ್ಲೆಗಳ ವಿದ್ಯಾರ್ಥಿಗಳು ಸರಕಾರಿ ಉದ್ಯೋಗ ಪಡೆಯುವಂತಾಗಬೇಕು. ಈ ದಿಸೆಯಲ್ಲಿ ಇಂತಹ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಕರಾವಳಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ನಮ್ಮ ಭಾಗದ ಮಕ್ಕಳು ಉದ್ಯೋಗದತ್ತ ಗಮನ ನೀಡಬೇಕು. ಎಲ್ಲಾ ಸಮುದಾಯದ ಅರ್ಹ ಪ್ರತಿಭಾವಂತ ಮಕ್ಕಳು ಉನ್ನತ ಸ್ನಾನಕ್ಕೇರಬೇಕೆಂಬುವುದು ನಮ್ಮ ಆಶಯ ಎಂದು ತಿಳಿಸಿದರು.
ಐಎಎಸ್ ದರ್ಶನ ಸಂಸ್ಥೆಯ ಮುಖ್ಯಸ್ಥ ದರ್ಶನ್ ಗರ್ತಿಕೆರೆ ತರಬೇತಿ ನಡೆಸಿಕೊಟ್ಟರು. ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ರಾಮ ಪೂಜಾರಿ ಮುಲ್ಲಿಮನೆ, ನಾರಾಯಣ ಪೂಜಾರಿ ಬಸ್ರೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.