ಬೆಳಗಾವಿ: ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಭಾರ ಪ್ರಾಚಾರ್ಯ ಡಾ. ಅರ್ಜುನ ಜಂಬಗಿ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಆದಿ ಕವಿಯೆಂದು ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಅವರು ಜಗತ್ತಿನ ಶ್ರೇಷ್ಠ ಕವಿವರ್ಯರು.
ಭಾರತದ ಮೊಟ್ಟಮೊದಲ ಮಹಾಕಾವ್ಯವಾದ ರಾಮಾಯಣವನ್ನು ರಚಿಸಿದ ಮೇರು ಕವಿ. ಅವರು ರಚಿಸಿದ ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಅವರ ಜೀವನ ವೃತ್ತಾಂತವು ಬಹಳಷ್ಟು ಏರಿಳಿತದಿಂದ ಕೂಡಿದೆ. ಜ್ಞಾನದ ಉಪಾಸನೆಯಿಂದ ಸಾಮಾನ್ಯನು ಅಸಾಮಾನ್ಯನಾಗಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿಯವರು ನಮಗೆ ಮಾದರಿಯಾಗಿದ್ದಾರೆ. ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿಯನ್ನು ಅರಿಯಲು ರಾಮಾಯಣವನ್ನು ಓದಲೇಬೇಕು ಎಂದು ಹೇಳಿದರು.
ಡಾ. ಮಲ್ಲೇಶ ದೊಡ್ಡಲಕ್ಕಣ್ಣವರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.