ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು.

ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಇಂದು (ಶನಿವಾರ ಜೂ.15) ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು. ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಸಲ್ಲಿಕೆ ವೇಳೆ ಸಭಾಧ್ಯಕ್ಷರ ಜತೆಗೆ ಕುಮಾರಸ್ವಾಮಿ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಸಭಾಧ್ಯಕ್ಷರು ಕುದುರೆಮುಖ ವಿಚಾರ ಕೇಳಿದ್ದು, ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಕೆಲವು ಮಾಹಿತಿ ಹಂಚಿಕೊಂಡರು. ಅಲ್ಲದೆ, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚತನದ ಬಗ್ಗೆಯೂ ಮಾತುಕತೆ ನಡೆಸಿದರು.

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ‘ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎರಡರಲ್ಲಿ ಒಂದು ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ, ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಮುಂದೆ ಮಾತನಾಡೋಣ’ ಎಂದರು.

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಕುಮಾರಸ್ವಾಮಿ ಪುತ್ರ ನಿಖಿಲ್ ಅವರ ಹೆಸರು ಕೇಳಿ ಬರುತ್ತಿದ್ದು ಬಿಜೆಪಿಯಿಂದ ಮಾಜಿ ಸಚಿವ ಯೋಗೇಶ್ವರ್ ಹೆಸರು ಸಹಾ ಮುಂಚೂಣಿಯಲ್ಲಿದೆ.

ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜೀನಾಮೆ ನೀಡಿದ್ದಾರೆ. ಈ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಸಂಬಂಧಿಸಿದ ಬಿಜೆಪಿಯಿಂದ ಬೊಮ್ಮಯ್ಯ ಅವರ ಸುಪುತ್ರ ಭರತ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.

ರಾಜೀನಾಮೆ ನಂತರ ಮಾತನಾಡಿದ
ಬಸವರಾಜ ಬೊಮ್ಮಾಯಿ, ‘ನಿರಂತರವಾಗಿ ನಾಲ್ಕು ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾವಿ ಕ್ಷೇತ್ರದ ಜನರಿಗೆ ಹೇಳುತ್ತೇನೆ’ ಎಂದರು.

‘ಶಿಗ್ಗಾವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಮುಖ್ಯಮಂತ್ರಿಯವರು ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಸಂಡೂರು ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಇದೀಗ ಬಳ್ಳಾರಿ ಲೋಕಸಭೆಯಿಂದ ಆಯ್ಕೆಯಾಗಿರುವ ತುಕಾರಾಂ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಈ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಅವರ ಪುತ್ರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಸಾಧ್ಯತೆ ಇದೆ.