ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕರಾವಳಿ ಜಿಲ್ಲೆಗಳಲ್ಲಿ ಪುತ್ತೂರು ಹಾಗೂ ಮಂಗಳೂರು ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು. ಆದರೆ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಾತಿನಿಧ್ಯ ವಹಿಸಲು ಸಚಿವ ಸ್ಥಾನ ನೀಡಿಲ್ಲ. ಹಿರಿಯ ಶಾಸಕರಾಗಿರುವ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಹುದ್ದೆಗೆ ನೇಮಕ ಮಾಡಲಾಗಿದೆ. ಹೀಗಾಗಿ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಖಾದರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಜೊತೆಗೆ ಪುತ್ತೂರಿನ ಕಾಂಗ್ರೆಸ್ ಶಾಸಕರಾಗಿರುವ ಅತ್ಯಂತ ಕ್ರಿಯಾಶೀಲರಾಗಿ ಪುತ್ತೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಶೋಕ್ ರೈ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರಾವಳಿ ಜಿಲ್ಲೆಗಳ ಅಭಿವೃದ್ಧಿ ವಿಷಯವಾಗಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಒತ್ತು ನೀಡುವುದಾಗಿ ಆಗಾಗ ಪ್ರಸ್ತಾಪಿಸುತ್ತಾ ಬಂದಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ನಿಟ್ಟಿನಲ್ಲಿ ಯು.ಟಿ.ಖಾದರ್ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಪ್ರಾಬಲ್ಯ ಸಾಧಿಸಿರುವ ಬಂಟ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ, ಇದೀಗ ಅದೇ ಸಮುದಾಯದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಬಂಟ ಸಮುದಾಯಕ್ಕೆ ಮನ್ನಣೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಜೊತೆಗೆ ಪುತ್ತೂರು ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಗಮನ ಸೆಳೆದಿರುವ ಅಶೋಕ್ ರೈ ಅವರ ಕ್ರಿಯಾಶೀಲತೆಗೆ ನಿರಾಯಾಸವಾಗಿ ಸಚಿವ ಸ್ಥಾನ ಒಲಿಯುವ ಸಾಧ್ಯತೆ ಕಂಡು ಬಂದಿದೆ.

ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ರೈ ಅವರನ್ನು ಸೇರಿಸಿಕೊಳ್ಳುವ ಮೂಲಕ ಕರಾವಳಿಯಲ್ಲಿ ಪಕ್ಷಕ್ಕೆ ಗತ ವೈಭವ ತಂದು ಕೊಡುವುದು ಕಾಂಗ್ರೆಸ್ ವರಿಷ್ಠರ ಕನಸಾಗಿದೆ. ಕೆಲಸಗಾರ ಎಂಬ ನೆಲೆಯಲ್ಲಿ ಅಶೋಕ್ ರೈ ಅವರಿಗೆ ಸ್ಥಾನ ನೀಡುವ ನೀಡಿ ಪಕ್ಷವನ್ನು ಕರಾವಳಿಯಲ್ಲಿ ಇನ್ನಷ್ಟು ಗಟ್ಟಿಯಾಗಿ ನೆಲೆಗೊಳಿಸಲು ಕಾಂಗ್ರೆಸ್ ಪಕ್ಷ ಮುಂದಾಗಿರುವುದು ಗುಟ್ಟಿನ ಸಂಗತಿ ಏನಲ್ಲ. ಜೊತೆಗೆ ಖಾದರ್ ಹಾಗೂ ಅಶೋಕ್ ರೈ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟವನ್ನು ನೀಡಲು ಕಾಂಗ್ರೆಸ್ ಪಕ್ಷ ಯೋಚಿಸಿದೆ ಎಂದು ಮೂಲಗಳು ತಿಳಿಸಿವೆ.