ಚೆನ್ನೈ: ತಮಿಳುನಾಡಿನ ವಿರುದ್ಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿರುದ್ಧುನಗರ ಜಿಲ್ಲೆಯ ವೆಂಬಕೊಟ್ಟಾಯಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ಅಷ್ಟೊತ್ತಿಗಾಗಲೇ ಹಲವು ಜನ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ ಕಾರಣ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕಾರ್ಖಾನೆಯ ಕೋಣೆಯೊಂದರಲ್ಲಿ ಕೆಮಿಕಲ್‌ ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡಿರುವ ಹಲವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಟಾಕಿ ಕಾರ್ಖಾನೆಯು ವಿಜಯ್‌ ಎಂಬುವವರಿಗೆ ಸೇರಿದೆ. ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಟಾಕಿ ಸ್ಫೋಟದ ತೀವ್ರತೆಗೆ ಕಾರ್ಖಾನೆ ಜತೆಗೆ ಅಕ್ಕಪಕ್ಕದ ನಾಲ್ಕು ಕಟ್ಟಡಗಳಿಗೂ ತೀವ್ರ ರೀತಿಯಲ್ಲಿ ಹಾನಿಯಾಗಿದೆ. ದುರಂತದ ಕುರಿತು ಇದುವರೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.