ಬೆಳಗಾವಿ : ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿಯನ್ನು ಚುರುಕುಗೊಳಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

9೦೦ ಕೋಟಿ ರೂಪಾಯಿ ವೆಚ್ಚದ ಬೆಳಗಾವಿ-ಕಿತ್ತೂರು-ಧಾರವಾಡ. ರೈಲುಮಾರ್ಗ ನಿರ್ಮಾಣ ಬಹುದಿನಗಳ ಕನಸು. ಆದ್ದರಿಂದ ಆದ್ಯತೆ ಮೇರೆಗೆ ಇದನ್ನು ಪೂರ್ಣಗೊಳಿಸಬೇಕು. ಕಾಮಗಾರಿಗೆ ಒಟ್ಟು ಅಗತ್ಯವಿರುವ 6೦೦ ಎಕರೆ ಪೈಕಿ ಧಾರವಾಡದಿಂದ ಬಾಗೇವಾಡಿವರೆಗಿನ 322 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಳಗಾವಿ ಸಮೀಪದ ಕುರುವಿನಕೊಪ್ಪ ಸೇರಿದಂತೆ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿನ 155 ಎಕರೆ ಭೂಸ್ವಾಧೀನ ಕೆಲಸ ಬಾಕಿಯಿದೆ ಎಂದು ಕೆ.ಆಯ್.ಡಿ.ಬಿ. ವ್ಯವಸ್ಥಾಪಕರು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಗದೀಶ ಶೆಟ್ಟರ ಅವರು,73 ಕಿ.ಮೀ. ಉದ್ದದ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿರುವುದರಿಂದ ಮಾರ್ಗ ಬದಲಾವಣೆ ಕುರಿತು ಚರ್ಚಿಸದೇ ಅಗತ್ಯ ಭೂಸ್ವಾಧೀನಕ್ಕೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ರೈತರ ಸಭೆ ಕರೆದು ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದ ಅವರು ರೈಲುಮಾರ್ಗ(ಅಲೈನ್ ಮೆಂಟ್) ಬದಲಾವಣೆ ಕುರಿತು ನ್ಯಾಯಾಲಯದ ಆದೇಶದಲ್ಲಿ ಇಲ್ಲ; ಆದ್ದರಿಂದ ಅಗತ್ಯವಿರುವ ಭೂಸ್ವಾಧೀನದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.

ಭೂಸ್ವಾಧೀನಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೆ ಪೊಲೀಸ್ ಭದ್ರತೆ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ಮೊತ್ತವನ್ನು ಕಾಲಮಿತಿಯೊಳಗೆ ಒದಗಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಟೆಂಡರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿವಿಧ ಪ್ಯಾಕೇಜ್ ಗಳಲ್ಲಿ 5೦೦ ಎಕರೆ ಭೂಸ್ವಾಧೀನ ಮಾಡಬೇಕಿತ್ತು. ಅದರಲ್ಲಿ ಈಗಾಗಲೇ 4೦ ಎಕರೆ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ. ಜಮೀನು ಭೂಸ್ವಾಧೀನ ಮಾಡಿಕೊಂಡ ಬಳಿಕವೇ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವುದು ಉತ್ತಮ ಎಂದು ಅಭಿಪ್ರಾಯ ಪಟ್ಟ ಸಂಸದರು ಭೂಸ್ವಾಧೀನ ಪ್ರಕ್ರಿಯೆ ಪೂರ್ಣವಾದ ಬಳಿಕವೇ ಟೆಂಡರ್ ಪ್ರಕ್ರಿಯೆ ನಡೆಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾನೂನು ಪರಿಮಿತಿಯೊಳಗೆ ರೈತರ ಜತೆ ಚರ್ಚೆ ನಡೆಸಿ ಮೊದಲ ಪ್ಯಾಕೇಜ್ ಗೆ ಸಂಬಂಧಿಸಿ ಎರಡು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ನಂತರ ಎರಡನೇ ಪ್ಯಾಕೇಜ್ ಪ್ರಕ್ರಿಯೆ ಆರಂಭಿಸಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು.

ಬೆಳಗಾವಿ ರಿಂಗ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಸ್ಮಾರ್ಟ್ ಸಿಟಿಗೆ ಸಂಬಂಧಿಸಿ ನಗರದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ನಿರ್ವಹಣೆಯು ಗುತ್ತಿಗೆದಾರರ ಜವಾಬ್ದಾರಿಯಾಗಿದ್ದು, ಕಳಪೆ ಕಾಮಗಾರಿ, ಸೂಕ್ತ ನಿರ್ವಹಣೆ ಆಗದೇ ಇದ್ದರೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ದಂಡ ವಿಧಿಸಲು ಅವಕಾಶವಿದ್ದು ಈ ಕುರಿತು ಕ್ರಮ ಜರಿಗಿಸಲು ಸಂಸದರಾದ ಜಗದೀಶ ಶೆಟ್ಟರ ಅವರು ಸೂಚಿಸಿದರು.
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ, ಮನರೇಗಾ, ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಜಿಲ್ಲೆ ಅತ್ಯುತ್ತಮ ಸ್ಥಾನದಲ್ಲಿರುವ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಂಸದರ ಗಮನಕ್ಕೆ ತಂದರು.

ವಿಮಾನ ನಿಲ್ದಾಣಕ್ಕೆ ಸಂಬಂಧಿಸಿ ಈಗಾಗಲೇ ಅಗತ್ಯ ಜಮೀನು ಒದಗಿಸಲಾಗಿದ್ದು, ಕಾಂಪೌಂಡ್ ನಿರ್ಮಿಸಿ ಗ್ರಾಮಸ್ಥರಿಗೆ ರಸ್ತೆ ಕಲ್ಪಿಸುವುದಕ್ಕೆ ಸಂಬಂಧಿಸಿ ವಿಮಾನ ನಿಲ್ದಾಣದ ಪ್ರಾಧಿಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ಗುಡಗುಂಟಿ, ಡಿ.ಸಿ.ಪಿ. ರೋಹನ್ ಜಗದೀಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ, ಕೆ.ಎ.ಐ.ಡಿ.ಬಿ., ವಿಮಾನ ನಿಲ್ದಾಣ, ಜಲಜೀವನ್ ಮಿಷನ್, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.