ಬೆಳಗಾವಿ – ಕಾಂಗ್ರೆಸ್ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶಾಖೆಗೆ ಭೇಟಿ ನೀಡಿ  ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಗೌರವಿಸಿ, ಆಶೀರ್ವಾದ ‌ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ್‌ ಹೆಬ್ಬಾಳ್ಕರ್,  ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ, ನಮ್ಮ ತಾಯಿಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಾಗೂ ವಿಧಾನಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸಹ ಶ್ರೀಗಳ ಮಾರ್ಗದರ್ಶನದಂತೆ ರಾಜಕೀಯದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ‌. ಅದೇ ರೀತಿ ಶ್ರೀಗಳು ನನಗೂ ಮಾರ್ಗದರ್ಶನ ನೀಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಆಯ್ಕೆ ಮಾಡಿದರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಮ್ಮ ಭಾಗದ ಎಲ್ಲ ಶಾಸಕರ ಮಾರ್ಗದರ್ಶನದಲ್ಲಿ  ಬೆಳಗಾವಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದರು.