ಬೆಳಗಾವಿ : ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಇದೀಗ ಮಹಾರಾಷ್ಟ್ರದಲ್ಲಿ ಕಿಡಿ ಹೊತ್ತಿಸಿದೆ. ಲಕ್ಷ್ಮಣ ಸವದಿ ಅವರ ವಿರುದ್ಧ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿ ಕಾರಿದ್ದಾರೆ.

ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎನ್ನುವ ಬೇಡಿಕೆ ಖಂಡನಾರ್ಹ. ಕಾಂಗ್ರೆಸ್ ಅಥವಾ ಬಿಜೆಪಿಯೇ ಆಗಿರಲಿ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಪ್ರಯತ್ನವನ್ನು ಶಿವಸೇನಾ (ಯುಬಿಟಿ) ಸಹಿಸುವುದಿಲ್ಲ. ಮುಂಬೈ ನಮ್ಮ ಜನ್ಮಭೂಮಿ. ಮರಾಠರು ಅದನ್ನು ರಕ್ತ ನೀಡಿ ಕಟ್ಟಿದ್ದಾರೆ. ನಮಗೆ ಮುಂಬೈಯನ್ನೂ ಯಾರೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕತ್ವವು ತನ್ನ ಶಾಸಕರಿಗೆ ಛೀಮಾರಿ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಸವದಿ ಹೇಳಿದ್ದೇನು?
ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಲಕ್ಷ್ಮಣ ಸವದಿ ಹೇಳಿದ್ದರು.

ಬೆಚ್ಚಿದ ಮಹಾರಾಷ್ಟ್ರ :
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಆಗಾಗ ಮಹಾರಾಷ್ಟ್ರ ನಾಯಕರು ಇಲ್ಲದ ತಂಟೆ- ತಕರಾರು ತೆಗೆಯುತ್ತಾರೆ. ಇದಕ್ಕೆ ತಕ್ಕ ತಿರುಗೇಟು ನೀಡಿದ್ದ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಇದೀಗ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಬದಲು ಎಲ್ಲಾ ಭಾಷಿಕರು ಇರುವ ಮುಂಬೈಯನ್ನು ಮೊದಲು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಕರ್ನಾಟಕ ವಿಧಾನಸಭೆಯಲ್ಲಿ ಘಂಟಾಘೋಷವಾಗಿ ಮಹಾರಾಷ್ಟ್ರಕ್ಕೆ ತಿರುಗೇಟು ನೀಡಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಇದೀಗ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂಬ ಲಕ್ಷ್ಮಣ ಸವದಿ ಹೇಳಿಕೆಯಿಂದ ಇಡೀ ಮಹಾರಾಷ್ಟ್ರ ನಾಯಕರು ಬೆಚ್ಚಿ ಬೀಳುವಂಥಾಗಿದೆ. ಅದರಲ್ಲೂ ಮಹಾರಾಷ್ಟ್ರದ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಶಿವಸೇನೆ ನಾಯಕರು ತಿರುಗಿ ಬಿದ್ದಿದ್ದಾರೆ. ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿ ಆಗಿರುವ ಲಕ್ಷ್ಮಣ ಸವದಿ ಅವರು ನಾಡು ನುಡಿಯ ವಿಷಯ ಬಂದಾಗ ಮೊದಲಿನಿಂದಲೂ ಮಹಾರಾಷ್ಟ್ರಕ್ಕೆ ತಕ್ಕ ಉತ್ತರವನ್ನು ನೀಡುತ್ತಾ ಬರುತ್ತಿದ್ದಾರೆ.