ಬೆಳಗಾವಿ:
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಬೇಕು. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸಂಪೂರ್ಣ ಮಾಹಿತಿ ಸಮೇತ ನೋಟಿಸ್‌ಗೆ ಉತ್ತರಿಸುವಂತೆ 4 ವಾರಗಳ ಕಾಲಾವಕಾಶ ನೀಡಿದೆ.
ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಕರಣ ಸಂಬಂಧ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.

ಸಂತ್ರಸ್ತೆಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಸರ್ಕಾರ :

ರಾಜ್ಯ ಸರ್ಕಾರ ಸಂತ್ರಸ್ತೆಗೆ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ, ಬೆಳಗಾವಿ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.