ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ನೇಹಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್ ಫಾರ್ ಲವ್ ಎಂಬ ಅಭಿಯಾನ ಶುರುವಾಗಿದ್ದು ಇದರಲ್ಲಿ ನೇಹಾ ಮತ್ತು ಫಯಾಜ್ ಜೊತೆಗೆ ಇರುವ ಫೋಟೋಗಳನ್ನು ಹಾಕಿಕೊಳ್ಳುವ ಮೂಲಕ ಹತ್ಯೆಯನ್ನು ಸಮರ್ಥಿಸಿ ಪೋಸ್ಟ್ ಹಾಕಲಾಗುತ್ತಿದೆ. ಇದಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನೇಹಾ ಮತ್ತು ಫಯಾಜ್ ಫೋಟೋಗಳನ್ನು ವೈರಲ್ ಮಾಡಿದ ಸಂಬಂಧ ಪೊಲೀಸರು ಧಾರವಾಡದ ಸಾದಿಕ್ ತಡಕೋಡ ಮತ್ತು ಆದಿಲ್ ಎಂಬುವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಸೂಕ್ಷ್ಮವಾಗಿ ಗಮನಿಸಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಇವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.