
ಬೆಂಗಳೂರು : ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಪುತ್ತೂರು ಶಾಸಕ ಅಶೋಕ ರೈ ಅವರು ಈ ಹಿಂದೆ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವಂತೆ ನಿರಂತರವಾಗಿ ರಾಜ್ಯ ಸರಕಾರದ ಮೇಲೆ ಒತ್ತಡ ಹೇರುತ್ತ ಬಂದಿದ್ದಾರೆ. ಇದರ ಫಲಶ್ರುತಿಯಾಗಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಶೋಕ ರೈ ಅವರ ಕನಸಿನ ಕೂಸಾದ ವೈದ್ಯಕೀಯ ಕಾಲೇಜು ಘೋಷಣೆ ಮಾಡುವ ಮೂಲಕ ಪುತ್ತೂರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಈ ಘೋಷಣೆ ಮಾಡುತ್ತಿದ್ದಂತೆ ಅಶೋಕ್ ರೈ ಅವರು ವಿಧಾನಸೌಧದ ಎದುರು ಕುಣಿದು ಕೊಪ್ಪಳಿಸಿ ಸಂಭ್ರಮ ಆಚರಿಸಿದರು.ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಅಲ್ಲದೆ, ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆ ಅನುಷ್ಠಾನಕ್ಕೆ ಗೊಳಿಸಲು ಉದ್ದೇಶಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠ ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟಿನಲ್ಲಿ ಘೋಷಿಸಿದ್ದಾರೆ.ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.