ಬೆಳಗಾವಿ: ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಅದರಲ್ಲೂ ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಕೂಗು ಇಡೀ ದೇಶಾದ್ಯಂತ ಮೊಳಗುತ್ತಿದೆ. ಆದರೆ, ಇದೀಗ ಕರ್ನಾಟಕದ ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಅತ್ಯಾಚಾರಿಗಳ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ನ್ಯಾಯಾಲಯ ಕಠಿಣ ಶಿಕ್ಷೆಯನ್ನು ತ್ವರಿತಗತಿಯಲ್ಲಿ ಜಾರಿ ಮಾಡುವ ಮೂಲಕ ಸದ್ದಿಲ್ಲದೆ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಇರುವ ಕಾನೂನನ್ನೇ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಹೊಸ ಇತಿಹಾಸ ಬರೆದಿದೆ. ಬಾಲಕಿಯರ ಅತ್ಯಾಚಾರ ಪ್ರಕರಣಗಳಲ್ಲಿ ತೀರ್ಪು ಈಗ ಸದ್ದು ಮಾಡುತ್ತಿದೆ.

ಐದೇ ದಿನದಲ್ಲಿ 9 ಜನರಿಗೆ 20 ವರ್ಷ ಶಿಕ್ಷೆ :
ಬೆಳಗಾವಿ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶರು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.

ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಕೇವಲ ಐದು ದಿನಗಳ ಅವಧಿಯಲ್ಲಿ ಮಹತ್ವದ ತೀರ್ಪು ನೀಡಿದ್ದಾರೆ.

ನಾಲ್ಕು ಪ್ರತ್ಯೇಕ ಪ್ರಕರಣಗಳ ವಿಚಾರಣೆ ನಡೆಸಿ 20 ವರ್ಷ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ವಿಶೇಷ ಅಭಿಯೋಜಕ ಎಲ್.ವಿ.ಪಾಟೀಲ ವಕಾಲತ್ತು ವಹಿಸಿ ಬಾಲಕಿಯರಿಗೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ. ಸೋಮವಾರ ಒಂದೇ ದಿನ ರಾಯಬಾಗದ ಇಬ್ಬರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. ಇಂದಿನ ಮಕ್ಕಳು ನಾಳಿನ ಪ್ರಜೆಗಳು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಸಮಾಜಕ್ಕೆ ಕಪ್ಪು ಚುಕ್ಕೆ. ಇಂತಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಶಿಕ್ಷೆ ನೀಡಲಾಗುತ್ತದೆ. ಐದು ದಿನದಲ್ಲಿ ಬಾಲಕಿಯರ ಅತ್ಯಾಚಾರ ಪ್ರತ್ಯೇಕ ಪ್ರಕರಣಗಳಲ್ಲಿ ಎಲ್ಲರಿಗೂ 20 ವರ್ಷ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರದ ವಿಶೇಷ ಅಭಿಯೋಜಕ ಎಲ್.ವಿ.ಪಾಟೀಲ ತಿಳಿಸಿದ್ದಾರೆ.

ಒಟ್ಟಾರೆ, ಇದೀಗ ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ನ್ಯಾಯಾಲಯ ನೀಡಿರುವ ತೀರ್ಪು ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ. ನ್ಯಾಯಾಲಯ ಉತ್ತಮ ಹಾದಿಯಲ್ಲಿ ಸಾಗುತ್ತಿರುವ ನಿದರ್ಶನಕ್ಕೆ ಇದೊಂದು ಉದಾಹರಣೆ ಎನ್ನಬಹುದು.