ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಕೆಲವು ಕಾರ್ಯಕ್ರಮಗಳಿಗೆ ಚಾಲನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಿಂದ ಹೊರಟು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿಯಿಂದ ಹೊರಟು ಮಧ್ಯಾಹ್ನ 2.40ಕ್ಕೆ ಶಿವಮೊಗ್ಗ ತಲುಪಲಿದ್ದಾರೆ.

ಮಧ್ಯಾಹ್ನ 3.15ಕ್ಕೆ ಶಿವಮೊಗ್ಗದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು, ಸಂಜೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ. ರಾತ್ರಿ ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ಗೆ ತೆರಳಲಿದ್ದಾರೆ.

ನಿತಿನ್​ ಗಡ್ಕರಿ ಅವರು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 6,975 ಕೋಟಿ ರೂ. ಮೌಲ್ಯದ 15 ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 6,168.41 ಕೋಟಿ ರೂ. ವೆಚ್ಚದ ರಸ್ತೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.