ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ( ಅಕ್ಟೋಬರ್‌ 9 ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಕೊಡಬೇಡಿ ಎಂದು ಆದೇಶ ಮಾಡಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಹೇಳಿದರು.

ಕಳೆದ ವರ್ಷ ಶೇ.83ರಷ್ಟು ಫಲಿತಾಂಶ ಬಂದಿತ್ತು. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 6,31,204 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಇವರಲ್ಲಿ ಶೇ.1.70 ಲಕ್ಷ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಕೃಪಾಂಕ ನೀಡಲಾಗಿತ್ತು. ಹೀಗಿದ್ದರೂ ಕಳೆದ ವರ್ಷಕ್ಕಿಂತ ಶೇ.10ರಷ್ಟು ಫಲಿತಾಂಶ ಕುಸಿದಿದ್ದು, ರಾಜ್ಯದ ಒಟ್ಟಾರೆ ಫಲಿತಾಂಶ ಶೇ.73.40 ರಷ್ಟು ಆಗಿದೆ. ಹಾಗಾಗಿ ಮುಂದಿನ ವರ್ಷದಿಂದ ಗ್ರೇಸ್‌ ಮಾರ್ಕ್ಸ್‌ಗಳನ್ನು ನೀಡುವುದಿಲ್ಲ. ಈ ವರ್ಷ 2288 ಶಾಲೆಗಳು ಶೇ.100 ರಷ್ಟು ಫಲಿತಾಂಶವನ್ನು ಮಾತ್ರ ಪಡೆದುಕೊಂಡಿವೆ ಎಂದು ಹೇಳಿದರು.