ಬೆಂಗಳೂರು : ಕೆಲವು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಶನಿವಾರ(ಏಪ್ರಿಲ್‌ 13)ದಿಂದ ಏಪ್ರಿಲ್​ 18ರವರೆಗೆ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 13 ರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಕರಾವಳಿಯಲ್ಲಿ ಏಪ್ರಿಲ್ 13 ರಿಂದ 18ರವರೆಗೆ ನಡುವೆ ಒಂದೆರಡು ದಿನ ಹೊರತುಪಡಿಸಿ ಬಹುತೇಕ ಎಲ್ಲ ದಿನಗಳಲ್ಲೂ ಅಲ್ಲಲ್ಲಿ ಮಳೆಯಾಗುವ ಸಾಧ್ಯೆತೆಯಿದ್ದು, ಉಳಿದ ಕಡೆ ವಾರದ ಆರಂಭ ಹಾಗೂ ಅಂತ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 14ರಿಂದ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.