ಬೆಳಗಾವಿ :

ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಗಾರೆಡ್ಡಿ ತಿಳಿಸಿದರು.

ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ (ಫೆ.18) ನಡೆದ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ, ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಬಸ್ ನಿಲ್ದಾಣಗಳ ಕೊರತೆ ಇಲ್ಲ. ಸಾರಿಗೆ ಇಲಾಖೆಯನ್ನು ಇನ್ನಷ್ಟು ಬಲಪಡಿಸಿ, ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಗಮನಹರಿಸಲಿದೆ. ಮುಂದಿನ 3 ತಿಂಗಳಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಕೈಗೊಂಡು ಸಂಚಾರ ವ್ಯವಸ್ಥೆ ಸುಧಾರಣೆಗೆ ತರಲಾಗುವುದು ಎಂದು ಹೇಳಿದರು.

ಅಪಘಾತಗಳಲ್ಲಿ ಮೃತರಾದ ಬಸ್ ಚಾಲಕರಿಗೆ, ಕಂಡಕ್ಟರ್ ಗಳ ವಾರಸುದಾರರಿಗೆ 50 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಪರಿಹಾರ ಧನವನ್ನು 1 ಕೋಟಿಗೆ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಶಕ್ತಿ ಯೋಜನೆ ಯಶಸ್ವಿ:

ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಜನರ ಬೇಡಿಕೆಯಂತೆ ನಗರದ ಜೊತೆಗೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹೊಸ ಬಸ್ ಗಳನ್ನು ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿ:

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರು ನೆಮ್ಮದಿಯಿಂದ ಬದುಕಿದ್ದಾರೆ. ಸರ್ಕಾರ ನುಡಿದಂತೆ ನಡೆದಿದೆ. ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಯಶಸ್ವಿಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಸಾರಿಗೆ ನೌಕರರ ಸೇವೆಗೆ ಮೆಚ್ಚುಗೆ:

ಈ ವರ್ಷ ಸುಮಾರು 700 ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆ ನಡೆದಿದೆ. ಮಳೆ, ಚಳಿ, ಬಿಸಿಲು ಏನೇ ಇದ್ದರೂ ಸಾರ್ವಜನಿಕರ ಸೇವೆಗೆ ಸಾರಿಗೆ ಇಲಾಖೆಯ ನೌಕರರು ಸದಾ ಶ್ರಮಿಸುತ್ತಿದ್ದಾರೆ. ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ಸೇವಾ ಮನೋಭಾವದ ಹಿಂದೆ ನಿಮ್ಮ ಕುಟುಂಬದ ತ್ಯಾಗ ಬಹಳಷ್ಟಿದೆ ಎಂದು ಹೇಳಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳು ಬಡವರಪರ ಯೋಜನೆಗಳಾಗಿವೆ. ರಾಜ್ಯದ ಬಹುಸಂಖ್ಯಾತ ಜನಸಮುದಾಯವನ್ನು ತಲುಪುವ ‘ಗ್ಯಾರಂಟಿ’ ಯೋಜನೆಗಳು ಸಂಪೂರ್ಣ ಯಶಸ್ವಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸಂತಸ ವ್ಯಕ್ತಪಡಿಸಿದರು.

ಬಸ್ ನಿಲ್ದಾಣಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ:

ಪ್ರತಿದಿನ ಸರಾಸರಿ 5 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಅದರಲ್ಲಿ ಶೇಕಡಾ 61% ರಷ್ಟು ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಬಸ್ ಗಳ ಸಂಚಾರದ ಕೊರತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಅದೇ ರೀತಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಹ ಕಲ್ಪಿಸಲಾಗುವುದು ಎಂದು ಕಾಗವಾಡ ವಿಧಾನಸಭೆ ಮತ ಕ್ಷೇತ್ರದ ಶಾಸಕರಾಗಿತುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಹೇಳಿದರು.

ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜನರ ಮನೆ ಬಾಗಿಲಿಗೆ ತಲುಪಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಕೇಂದ್ರ ಕಚೇರಿಯ ವ್ಯವಸ್ಥಾಪಕ ನಿರ್ದೇಶಕ ಭರತ.ಎಸ್
ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ಳಿ ಪದಕ ವಿತರಣೆ:

ಇದಕ್ಕೂ ಮುಂಚೆ ನೂತನವಾಗಿ 50 ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಲಾಯಿತು.
ಬಳಿಕ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು
ಅಪಘಾತ ರಹಿತ 5 ವರ್ಷಗಳ ವಾಹನ ಚಾಲನೆ ಮಾಡಿದ 38 ಬಸ್ ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪತ್ರ ನೀಡಿ, ಸನ್ಮಾನಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಅಶೋಕ ಪಟ್ಟಣ, ಕಿತ್ತೂರು ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ವಾ.ಕ.ರ.ಸಾ ಸಂಸ್ಥೆಯ ಬೆಳಗಾವಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಗಣೇಶ ರಾಥೋಡ ಉಪಸ್ಥಿತರಿದ್ದರು ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಸಿಬ್ಬಂದಿಗಳು, ಕುಟುಂಬ ವರ್ಗದವರು ಮತ್ತಿತರು ಹಾಜರಿದ್ದರು.